ಪುತ್ತೂರು: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ, ಭಕ್ತಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ, ಸಂಘದ ಅಧ್ಯಕ್ಷರೂ ಆದ ಸರ್ವೆ ಗ್ರಾಮದ ಸರ್ವೆದೋಳಗುತ್ತು ನಿವಾಸಿ ರಾಜೇಶ್ ಎಸ್ .ಡಿ((43) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಮಾ.22ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ವಿಷ ಪದಾರ್ಥ ಸೇವಿಸಿದ್ದು ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಜೀವನ್ಮರಣ ಹೋರಾಟ ನಡೆಸಿದ ಅವರು ಮಾ.24ರಂದು ಸಂಜೆ ಕೊನೆಯುಸಿರೆಳೆದಿದ್ದಾರೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿರುವ ರಾಜೇಶ್ ಅವರು ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ಯುವಕ ಮಂಡಲದ ವತಿಯಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುತ್ತಿದ್ದರು. ಭಕ್ತಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಥಿಲಾವಸ್ಥೆಗೆ ತಲುಪಿದ್ದ ಸಂದರ್ಭದಲ್ಲಿ ಹೊಸ ಶಾಲಾ ಕಟ್ಟಡ ನಿರ್ಮಾಣ ವಿಚಾರದಲ್ಲಿಯೂ ರಾಜೇಶ್ ಎಸ್.ಡಿ ಅವರು ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು. ಸರ್ವೆ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದಹಾಗೂ ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದ ಅವರು ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದರು. ಮೃತರು ತಾಯಿ, ಸಹೋದರಿ, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಹೊಸ ಮನೆ ಕಟ್ಟಿಸಿದ್ದರು:
ರಾಜೇಶ್ ಎಸ್.ಡಿ ಅವರು ವರ್ಷದ ಹಿಂದೆ ಹೊಸ ಮನೆ ನಿರ್ಮಿಸಿದ್ದು ಗೃಹಪ್ರವೇಶ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಮಾಡಿದ್ದರು.
ರಾಜೇಶ್ ಎಸ್.ಡಿ ಅವರು ಆರ್ಥಿಕವಾಗಿ ಸದೃಡವಾಗಿದ್ದು ಕೃಷಿ ತೋಟವನ್ನೂ ಹೊಂದಿದ್ದಾರೆ. ಹಾಗಾಗಿ ಅವರು ಆರ್ಥಿಕ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅವರ ಗೆಳೆಯರು ತಿಳಿಸಿದ್ದಾರೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಸಂಘಟನಾತ್ಮಕವಾಗಿ ತೊಡಗಿಸಿಕೊಂಡಿದ್ದ ರಾಜೇಶ್ ಎಸ್.ಡಿ ಅವರು ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡರು ಎನ್ನುವುದು ಮಾತ್ರ ತಿಳಿದು ಬಂದಿಲ್ಲ.