ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗೆ ಹಲ್ಲೆ ಯತ್ನ – ಆರೋಪಿ ತಾಯಿ,ಮಗನಿಗೆ ನಿರೀಕ್ಷಣಾ ಜಾಮೀನು

0

ಪುತ್ತೂರು: ಇಲ್ಲಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಅವರೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಆರೋಪಿಗಳಾಗಿರುವ ತಾಯಿ,ಮಗನಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಘಟನೆಗೆ ಸಂಬಂಧಿಸಿ ಸುಳ್ಯಪದವಿನ ಜೊಹರಾ ಮತ್ತು ಅವರ ಮಗ ಸಮದ್ ಎಂಬವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡರೂ ಬಳಿಕ ಬಂಧಿಸದೇ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಪ್ರತಿಭಟನೆ ನಡೆದಿತ್ತು. ವಿವಿಧ ವೈದ್ಯಕೀಯ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಹಲವು ವೈದ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಹಿಂದೂ ಸಂಘಟನೆಗಳ ಪ್ರಮುಖರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆರೋಪಿಯ ಪತ್ತೆಗೆ ಪೊಲೀಸರಿಗೆ ಗಡುವು ನೀಡಲಾಗಿತ್ತು. ಆದರೆ ಎರಡೆರಡು ಬಾರಿ ನೀಡಿದ್ದ ಗಡುವು ಮುಗಿದರೂ ಆರೋಪಿಗಳ ಬಂಧನವಾಗಿರಲಿಲ್ಲ. ರಾತ್ರಿ ವೇಳೆಯೂ ಪ್ರತಿಭಟನೆ ಮುಂದುವರಿದು ಬಳಿಕ ಎಸ್ಪಿಯವರು ಆರೋಪಿಯ ಬಂಧನದ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈಬಿಡಲಾಗಿತ್ತು. ಈ ಮಧ್ಯೆ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯವರೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆಗೆ ಯತ್ನಿಸಿದ್ದ ಪ್ರಕರಣವನ್ನು ಖಂಡಿಸಿ ಸರಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದರು. ಪ್ರಕರಣದ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ವಕೀಲರಾದ ಅಶ್ರಫ್ ಅಗ್ನಾಡಿ, ಅಬ್ದುಲ್ ಮಜೀದ್ ಖಾನ್, ಸೆಲೀನಾ ನೆಕ್ಕಿಲಾಡಿ,‌ ಮಿಶ್ರಿಯಾ ವಾದಿಸಿದ್ದರು.

LEAVE A REPLY

Please enter your comment!
Please enter your name here