ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶೀಘ್ರವೇ ಭಕ್ತರಿಗೆ ಸಿಗಲಿದೆ ಬೆಳಗಿನ ಉಪಾಹಾರ

0

ಕಾಣಿಯೂರು: ರಾಜ್ಯದ ಪ್ರಸಿದ್ಧ ನಾಗಕ್ಷೇತ್ರ, ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಪ್ರಥಮ ಸಭೆ ದೇವಸ್ಥಾನದ ಆಡಳಿತ ಕಛೇರಿ ಸಭಾಂಗಣದಲ್ಲಿ ಮೇ.21 ರಂದು ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದಲ್ಲಿ ಕ್ಷೇತ್ರದ ವತಿಯಿಂದ ಭಕ್ತರಿಗೆ ಬೆಳಗ್ಗಿನ ಉಪಹಾರ ನೀಡುವ ಯೋಜನೆ ಆರಂಭಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.


ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ಕೆಲವು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಶೀಘ್ರದಲ್ಲಿ ಬೆಳಗ್ಗಿನ ಉಪಹಾರ ಯೋಜನೆ ಆರಂಭಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು. ಕ್ಷೇತ್ರದಲ್ಲಿ ಆಶ್ಲೇಷ ಸೇವೆ ನಡೆಸಲು ಹೊಸ ಕಟ್ಟಡ ನಿರ್ಮಿಸಲು ಈ ಹಿಂದೆ ದಾನಿಗಳೋರ್ವರು ಮುಂದೆ ಬಂದಿದ್ದರು. ಆದರೆ ಕಟ್ಟಡ ಕಾಮಗಾರಿ ಆರಂಭಗೊಂಡಿರಲಿಲ್ಲ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಆಶ್ಲೇಷ ಸೇವೆಪೂಜೆ ನಡೆಸುವ ಹೊಸ ಕಟ್ಟಡ ಕಾಮಗಾರಿಯನ್ನು ಆದಷ್ಟು ಬೇಗ ಚಾಲನೆ ನೀಡುವ ಬಗ್ಗೆ ಸಭೆಯಲ್ಲಿ ತೀರ್ಮಾಣ ಕೈಗೊಳ್ಳಲಾಯಿತು.


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಹೆಚ್ಚು ಸೀಟುಗಳ ಅವಶ್ಯಕತೆ ಇದ್ದು, ಹೆಚ್ಚುವರಿ ವಿಭಾಗ ತೆರೆಯಬೇಕು ಎಂದು ಸಭೆಯಲ್ಲಿ ಪ್ರಸ್ತಾಪಗೊಂಡಿತು. ಈ ಬಗ್ಗೆ ಬೆಂಗಳೂರಿಗೆ ನಿಯೋಗ ತೆರಳಿ ಇಲಾಖೆಯಲ್ಲಿ ಅನುಮತಿಗಾಗಿ ಮನವಿ ಸಲ್ಲಿಸಿ ಈ ವರ್ಷದಿಂದಲೇ ಹೆಚ್ಚುವರಿ ವಿಭಾಗ ಆರಂಭಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ದೇವಸ್ಥಾನದ ವತಿಯಿಂದ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು.


ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ.ಬಿ.ರಘು, ಅಶೋಕ್ ನೆಕ್ರಾಜೆ, ಮಹೇಶ್ ಕುಮಾರ್ ಕರಿಕ್ಕಳ, ಅಜಿತ್ ಕುಮಾರ್, ಸೌಮ್ಯ ಬಿ.ಕೆ., ಪ್ರವೀಣ ಪಿ., ಲೀಲಾ ಮನಮೋಹನ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here