ಪುತ್ತೂರು: ಬಡತನ ವಿದ್ಯೆಗೆ ಅಡ್ಡಿಯಾಗುವುದಿಲ್ಲ. ಸರಕಾರಿ ಶಾಲೆ ಗಳಲ್ಲಿ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ಹಾಲು, ಮೊಟ್ಟೆ ಸೇರಿದಂತೆ ಎಲ್ಲಾ ಸೌಲಭ್ಯ ನೀಡುತ್ತಿದೆ. ಇದಕ್ಕೆ ಪೂರಕವಾಗಿ ಪೋಷಕರು ಪ್ರೋತ್ಸಾಹ ನೀಡಿದಾಗ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಮೊಟ್ಟೆತ್ತಡ್ಕದಲ್ಲಿರುವ ಕೆಮ್ಮಿಂಜೆ ಸ.ಹಿ.ಪ್ರಾ ಶಾಲೆಯಲ್ಲಿ ಜೂ.2ರಂದು ನಡೆದ 2025ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿ,ಮಕ್ಕಳಿಗೆ ಪುಸ್ತಕ, ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.
ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಖಾಸಗಿ ಶಾಲೆಗಳಲ್ಲಿ ಮಾತ್ರವೇ ಗುಣಮಟ್ಟದ ಶಿಕ್ಷಣ ದೊರೆಯುವುದು ಎಂಬ ಭಾವನೆಯಿಂದ ಪೋಷಕರು ಹೊರಬರಬೇಕು. ಸರಕಾರಿ ಶಾಲೆಗಳಲ್ಲಿ ಎಲ್ಲಾ ಶಿಕ್ಷಕರು ಪರಿಗಣಿತರಾಗಿದ್ದಾರೆ. ಭಾಷಾವಾರು ಶಿಕ್ಷಕರಿದ್ದಾರೆ. ಎಲ್ಲಿಯೂ ಶಿಕ್ಷಕರ ಕೊರತೆಯಿಲ್ಲ. ಪಠ್ಯಪುಸ್ತಕ, ಸಮವಸ್ತ್ರಗಳಿಗೂ ಕೊರತೆಯಿಲ್ಲ. ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಪ್ರಾಥಮಿಕ ಹಂತದಲ್ಲಿ ಗುಣಮಟ್ಟದ ಶಿಕ್ಷಣ ದೊರೆತಾಗ ಮಕ್ಕಳ ಭವಿಷ್ಯದ ತಲಪಾಯ ಭದ್ರವಾಗಲಿದೆ.
ಶಿಕ್ಷಕರ ಮನೆಗಿಂತ ಹೆಚ್ಚು ಶಾಲೆ ಪ್ರೀತಿಸುತ್ತಾರೆ. ಅದನ್ನು ಪಡೆದುಕೊಳ್ಳಬೇಕಾದ ಹೊಣೆ ಪೋಷಕರಲ್ಲಿದೆ. ಪೋಷಕರು ಮನೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ಮಾಡಬೇಕು. ಪೋಷಕರ ನಡತೆಯು ಸರಿಯಾಗಿರಬೇಕು ಎಂದರು.

ನಗರ ಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದಾರೆ.ವಿದ್ಯಾರ್ಥಿಗಳಿಗೆ ಸರಕಾರ ಎಲ್ಲ ಸವಲತ್ತುಗಳನ್ನು ನೀಡುತ್ತಿದ್ದು ಅವುಗಳನ್ನು ಪಡೆದುಕೊಂಡು ಉನ್ನತ ಶಿಕ್ಷಣ ಪಡೆದು ದೇಶದ ಉತ್ತಮ ಪ್ರಜೆಗಳಾಗಿ ಮೂಡಿಬರಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಅರ್ ಮಾತನಾಡಿ, ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ನೀಡುವ ಶಿಕ್ಷಣಗಳಿಗೆ ವ್ಯತ್ಯಾಸಗಳಿವೆ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನೇ ನೀಡಲಾಗುತ್ತಿದ್ದು ಮಗುವಿನ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಎಲ್ಲಾ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಎಸ್ಡಿಎಂಸಿ ಅಧ್ಯಕ್ಷ ಮೋಹನ್ ಅಮ್ಮುಂಜೆ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮನ್ವಯಧಿಕಾರಿ ನವೀನ್ ಸ್ಟಿಫನ್ ವೇಗಸ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಕೆಮ್ಮಿಂಜೆ ಸ.ಹಿ.ಪ್ರಾ ಶಾಲಾ ಮುಖ್ಯಗುರು ಸಂತೋಷ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.