ಮಂಗಳೂರು ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

0

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ವಿಚಾರಣೆ ಸಮಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಮಂಗಳವಾರ ವಶಕ್ಕೆ ಪಡೆದು, ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.‌

ಮಂಜನಾಡಿ ಕಲ್ಕಟ್ಟ ಬದ್ರಿಯ ನಗರದ ಮೊಹಮ್ಮದ್ ಅಬ್ದುಲ್ ಫಯಾನ್ (27) ಬಂಧಿತ ಆರೋಪಿ.

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೊಹಮ್ಮದ್ ಅಬ್ದುಲ್ ಫಯಾನ್ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ಜಿಲ್ಲೆಯ ಬಂಟ್ವಾಳ ನಗರ ಮತ್ತು ಗ್ರಾಮಾಂತರ, ಉಪ್ಪಿನಂಗಡಿ, ಕಡಬ, ಪುತ್ತೂರ ನಗರ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರ್ಕಾರಿ ಕಚೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ನ್ಯಾಯಾಂಗ ಬಂಧನದಲ್ಲಿದ್ದಾಗ ಕಾರಾಗೃಹದಲ್ಲಿ ಇತರ ಕೈದಿಗಳ ಮೇಲೆ ಹಲ್ಲೆ ನಡೆಸಿರುವುದಲ್ಲದೆ ಜೈಲು ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನ ನಡೆಸಿದ ಪ್ರಕರಣದಲ್ಲಿ ಈತ ಆರೋಪಿ. ಮೊಹಮ್ಮದ್ ಅಬ್ದುಲ್ ಫಯಾನ್ ವಿರುದ್ಧ ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 24 ವಾರಂಟ್ ಇವೆ. ಈತನ ಮೇಲೆ ಕೇರಳ ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಸಹ ಹಲವಾರು ಪ್ರಕರಣಗಳು ದಾಖಲಾಗಿವೆ.

LEAVE A REPLY

Please enter your comment!
Please enter your name here