ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸರಕಾರಿ ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ, ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನಾ ಮಂಜೂರಾತಿ ಪತ್ರ ವಿತರಣೆಯು ಆ.1ರಂದು ಧರ್ಮಸ್ಥಳ ಕಟ್ಟಡದಲ್ಲಿರುವ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿ ಸಭಾಂಗಣದಲ್ಲಿ ನೆರವೇರಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೇನೆ. ಮಧ್ಯವರ್ಜನ ಶಿಬಿರ ಉತ್ತಮ ಕಾರ್ಯಕ್ರಮವಾಗಿದ್ದು, ಹಲವು ಮಹಿಳೆಯರ ಕಣ್ಣೀರು ಒರೆಸುವ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿದೆ. ಹಲವಾರು ಮಹಿಳೆಯರಲ್ಲಿ ಬದಲಾವಣೆಗೆ ಸಹಕಾರಿಯಾಗಿರುವ ಯೋಜನೆಯು ಹಲವು ಕುಟುಂಬಗಳನ್ನು ಸಂತೋಷವಾಗಿಡುವಲ್ಲಿ ಸಹಕಾರಿಯಾಗಿದೆ.
ಗ್ರಾಮಾಭಿವೃದ್ಧಿ ಯೋಜನೆಯಿಂದ ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಸಹಕಾರ ದೊರೆತಿದ್ದು, ದೇವಸ್ಥಾನದಲ್ಲಿ ಮುಂದೆ ನಡೆಯುವ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿಯೂ ಸಹಕರಿಸುವಂತೆ ವಿನಂತಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಯೋಜನೆಯ ಹಲವು ಕಾರ್ಯಕ್ರಮಗಳಲ್ಲಿ ಶಿಕ್ಷಕರ ನೇಮಕ, ವಿದ್ಯಾರ್ಥಿ ವೇತನ ವಿತರಣೆಯು ಒಂದಾಗಿದೆ. ಸರಕಾರಿ ಶಾಲೆಗಳ ಜೊತೆಗೆ ಅನುದಾನಿತ ಶಾಲೆಗಳಿಗೂ ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ. ಅಲ್ಲೆ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಸಮುದಾಯ ಅಭಿವೃದ್ಧಿ ಮೂಲಕ ಯೋಜನೆಯ ಲಾಭಾಂಶದಲ್ಲಿ ಸಾರ್ವನಿಕ ಕಾರ್ಯಕ್ರಮಗಳಿಗೆ ಬಳಕೆ ಮಾಡಲಾಗುತ್ತಿದೆ. ಸರಕಾರದ ಎಲ್ಲಾ ಯೋಜನೆಗಳಿಗೆ ಪೂರಕವಾಗಿ ಯೋಜನೆಯ ಕಾರ್ಯಕ್ರಮಗಳು ನಡೆಯುತ್ತಿದೆ ಎಂದರು.
ಶಿಕ್ಷಣ ಸಂಯೋಜಕ ಹರಿಪ್ರಸಾದ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮೂಲಕ ನಡೆಯುವ ವಿವಿಧ ಯೋಜನೆಗಳ ಮೂಲಕ ಸಾಮಾಜಿಕ ಎಲ್ಲರಿಗೂ ಅವಕಾಶ ನೀಡುತ್ತಿರುವುದನ್ನು ಶ್ಲಾಘಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಮಹಾಬಲ ರೈ ವಲತ್ತಡ್ಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಮಹಾಬಲ ಕುಲಾಲ್, ಯೋಜನೆಯ ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
14 ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅನುಕೂಲವಾಗುವ ಸುಮಾರು ರೂ.2೦೦೦ ಮೌಲ್ಯದ ವಾತ್ಸಲ್ಯ ಕಿಟ್, ಉನ್ನತ ವ್ಯಾಸಂಗ ಮಾಡುವ 365 ವಿದ್ಯಾರ್ಥಿಗಳಗೆ ತಲಾ ರೂ.8೦೦೦ದಂತೆ ನೀಡುವ ಸುಜ್ಞಾನನಿಧಿ ವಿದ್ಯಾರ್ಥಿ ವೇತನ, ಜಿಲ್ಲೆಯ 4 ತಾಲೂಕುಗಳಲ್ಲಿ ಶಿಕ್ಷಕರ ಕೊರತೆಯಿರುವ 55 ಸರಕಾರಿ ಶಾಲೆಗಳಿಗೆ ಯೋಜನೆಯಿಂದ ನಿಯೋಜನೆಗೊಂಡಿರುವ ಶಿಕ್ಷಕರಿಗೆ ಮಂಜೂರಾತಿ ಪತ್ರವನ್ನು ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ತಾಲೂಕು ಯೋಜನಾಧಿಕಾರಿ ಶಶಿಧರ್ ಎಂ.ಸ್ವಾಗತಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ ವಂದಿಸಿದರು. ಶಿಕ್ಷಕಿ ಚಂದ್ರಕಲಾ ಪ್ರಾರ್ಥಿಸಿದರು. ಶಿಕ್ಷಕರಾದ ಪೂರ್ಣಿಮಾ, ಕಾವ್ಯ, ಮಮತಾ, ವನ್ಯಶ್ರೀ, ನಿಶ್ಚಿತ, ಜ್ಯೋತಿ, ಧನ್ಯಶ್ರೀ, ಜ್ಯೋತಿ ಅತಿಥಿಗಳಿಗೆ ಹೂಗುಚ್ಚ ನೀಡಿ ಸ್ವಾಗತಿಸಿದರು.