ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನಿಗಮಗಳ ನೌಕರರು ಆ.5ರಂದು ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಒಂದು ದಿನದ ಮಟ್ಟಿಗೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ನಗರದ ಜೆ. ಸುನೀಲ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಎಸ್. ಮುದ್ಗಲ್ ಮತ್ತು ನ್ಯಾಯಮೂರ್ತಿ ಎಂ. ಜೆ. ಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠವು, ಮುಷ್ಕರಕ್ಕೆ ಒಂದು ದಿನದ ಮಟ್ಟಿಗೆ ತಡೆ ನೀಡಿದೆ.
ವಿಚಾರಣೆ ವೇಳೆ ಸಾರಿಗೆ ನಿಗಮಗಳ ಪರ ವಕೀಲರು, ಸಾರಿಗೆ ನೌಕರರ ಸಂಘಟನೆಗಳ ಪರ ಮುಖಂಡರೊಂದಿಗೆ ಮುಖ್ಯಮಂತ್ರಿಗಳ ಸಂಧಾನ ಸಭೆ ನಡೆಯುತ್ತಿದೆ. ಹೀಗಾಗಿ ಮುಷ್ಕರ ಮುಂದೂಡಬೇಕು ಎಂದು ಕೋರಿದರು. ಈ ಅಂಶ ದಾಖಲಿಸಿಕೊಂಡ ಪೀಠ, ಮುಷ್ಕರಕ್ಕೆ ಒಂದು ದಿನದ ಮಟ್ಟಿಗೆ ತಡೆ ನೀಡಿ ವಿಚಾರಣೆ ಮುಂದೂಡಿದೆ.