ಉಪ್ಪಿನಂಗಡಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ ಪುತ್ತೂರು ಇವರ ಆಶ್ರಯದಲ್ಲಿ ತಾ.ಪಂ. ಪುತ್ತೂರು, ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು, ಅನಿಕೇತನ್ ಎಜ್ಯುಕೇಷನ್ ಟ್ರಸ್ಟ್ ಪುತ್ತೂರು, ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಇವರ ಸಹಭಾಗಿತ್ವದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯ ಅಂಗವಾಗಿ ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ವಕೀಲ ಕೃಷ್ಣಪ್ರಸಾದ್ ನಡ್ಸಾರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ತಡೆಯ ಬಗ್ಗೆ ಕಾನೂನು ಮಾಹಿತಿಯನ್ನು ನೀಡಿದರು. ವಕೀಲೆ ಪ್ರಿಯಾ ಅವರು ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಉಪ್ಪಿನಂಗಡಿ ಗ್ರಾ.ಪಂ.ಅಧ್ಯಕ್ಷೆ ಲಲಿತಾ, ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಸರಸ್ವತಿ ಕ್ರೆಡಿಟ್ ಸೌಹಾರ್ದ ಸಂಘ ಪುತ್ತೂರು ಇದರ ಶಾಖಾ ವ್ಯವಸ್ಥಾಪಕ ದೇವಿಪ್ರಸಾದ್ ಎ., ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ಇದರ ಜೊತೆ ಕಾರ್ಯದರ್ಶಿ ಲೋಕಯ್ಯ ಗೌಡ ಸಂಪ್ಯಾಡಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ದಿವ್ಯಜ್ಯೋತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲತಾ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಜಯಶ್ರೀ, ಮುಖ್ಯ ಪುಸ್ತಕ ಬರಹಗಾರ್ತಿ ಚೈತ್ರ, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪ್ಪಿನಂಗಡಿ ಗ್ರಾ.ಪಂ. ಆಯೋಜಿಸಿರುವ ಕಾಲೇಜಿನ ಎನ್ನೆಸ್ಸೆಸ್ ಘಟಕದ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಸಲಾಯಿತು.
ಕುಮಾರಿ ರಶ್ಮಿ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಇಬ್ರಾಹೀಂ ಎಂ. ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕರಾದ ರಮೇಶ್ ಎಚ್.ಜೆ. ವಂದಿಸಿದರು. ಕನ್ನಡ ಉಪನ್ಯಾಸಕಿ ಕು. ಸಾಧನಾ ಕಾರ್ಯಕ್ರಮ ನಿರೂಪಿಸಿದರು.