ರಾಜಕೀಯ ಪಕ್ಷಗಳ ಚಿಹ್ನೆ ಆಧಾರದಲ್ಲಿ ಗ್ರಾ.ಪಂ.ಗಳಿಗೂ ಚುನಾವಣೆ: ಸಾಧ್ಯಾಸಾಧ್ಯತೆಗಳ ಅಧ್ಯಯನಕ್ಕೆ ಸಮಿತಿ ರಚನೆ

0

ಬೆಂಗಳೂರು:ಕೇರಳ ಮಾದರಿಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಗಳನ್ನೂ ರಾಜಕೀಯ ಪಕ್ಷಗಳ ಚಿಹ್ನೆ ಆಧಾರದಲ್ಲಿ ನಡೆಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಲು ಸಮಿತಿ ರಚನೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.


ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಎಂ.ಮಂಜುನಾಥ ಭಂಡಾರಿ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದರು.ರಾಜಕೀಯ ಪಕ್ಷಗಳ ಚಿಹ್ನೆ ಆಧಾರದ ಮೇಲೆ ಚುನಾವಣೆ ನಡೆಸುವುದು ಸುಲಭದ ಮಾತಲ್ಲ.ಈ ವಿಚಾರದಲ್ಲಿ ಬೇರೆ ರಾಜ್ಯಗಳಲ್ಲಿ ಯಾವ ಪದ್ಧತಿಯಿದೆ ಎಂಬ ಬಗ್ಗೆ ಅಧ್ಯಯನದ ಅಗತ್ಯವಿದೆ.ಹಾಗಾಗಿ ಸಮಿತಿ ರಚಿಸುವ ಬಗ್ಗೆ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ಪರಿಷತ್ ಸದಸ್ಯರ ಸಭೆ ಕರೆದು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.


ಗ್ರಾಮ ಪಂಚಾಯಿತಿಗಳ ಅವಧಿ 2026ರ ಜನವರಿಗೆ ಮುಕ್ತಾಯವಾಗಲಿದೆ.ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನೂ ಗ್ರಾ.ಪಂ.ಚುನಾವಣೆ ಜೊತೆಗೆ ನಡೆಸಬೇಕೆಂಬುದು ಹಲವು ಸದಸ್ಯರ ಆಗ್ರಹವಾಗಿದೆ.ಆ ಬಗ್ಗೆಯೂ ಪರಿಶೀಲಿಸಲಾಗುವುದು ಎಂದ ಸಚಿವರು,ಸದ್ಯ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಯಾವುದೇ ಅಡ್ಡಿ ಇಲ್ಲ.ಮೀಸಲು ನಿಗದಿ ಪ್ರಕ್ರಿಯೆ ಜಾರಿಯಲ್ಲಿದ್ದು,ಅದು ಎರಡು ತಿಂಗಳಲ್ಲಿ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದರು.


ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿಗಳು ಅಸ್ತಿತ್ವದಲ್ಲಿಲ್ಲದ ಕಾರಣ ಅನುದಾನ ಕಡಿತವಾಗಿದೆ ಎಂಬುದನ್ನು ಮತ್ತು ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ ಎಂಬುದನ್ನು ನಾನೂ ಒಪ್ಪುತ್ತೇನೆ ಎಂದ ಖರ್ಗೆ,ಪಂಚಾಯತಿ ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಣ ಹಾಗೂ ಸಬಲೀಕರಣಗೊಳಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು.


ಸದಸ್ಯರ ಗೌರವಧನ ಹೆಚ್ಚಳಕ್ಕೆ ಹಣಕಾಸು ಇಲಾಖೆಗೆ ಮನವಿ:
ಗ್ರಾಮ ಪಂಚಾಯಿತಿ ಸದಸ್ಯರ ಸಹಿತ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಽಗಳ ಗೌರವ ಧನ ಹೆಚ್ಚಳ ಕುರಿತ ಪ್ರಸ್ತಾವವನ್ನು ಹಿಂದೆ ಹಣಕಾಸು ಇಲಾಖೆ ತಿರಸ್ಕರಿಸಿತ್ತು.ಎಲ್ಲಾ ಸದಸ್ಯರ ಆಶಯದಂತೆ ಮತ್ತೆ ಹಣಕಾಸು ಇಲಾಖೆಗೆ ಮನವಿ ಸಲ್ಲಿಸಿ ಗೌರವ ಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.


ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿಗಳಿಗೆ ನಾಲ್ಕು ವರ್ಷಗಳಿಂದ ಜನಪ್ರತಿನಿಧಿಗಳಿಲ್ಲ.ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ.ರಾಜಕೀಯ ಪಕ್ಷಗಳ ಚಿಹ್ನೆ ಆಧಾರದಲ್ಲಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು.ಅದಕ್ಕೆ ಸದಸ್ಯರಾದ ಡಿ.ಎಸ್.ಅರುಣ್, ಕೆ.ಎಸ್. ನವೀನ್ ಮತ್ತಿತರರು ದನಿಗೂಡಿಸಿದರು.

LEAVE A REPLY

Please enter your comment!
Please enter your name here