ಪುತ್ತೂರು: ಕೆಂಪು ಕಲ್ಲು ಸಾಗಾಟಕ್ಕೆ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಯಾವುದೇ ರೀತಿಯ ತೊಂದರೆ ನೀಡದಂತೆ ಬ್ಲಾಕ್ ಕಾಂಗ್ರೆಸ್‌ನಿಂದ ಪುತ್ತೂರು ತಹಶೀಲ್ದಾರ್‌ರವರಿಗೆ ಮನವಿ ಮಾಡಿದ್ದಾರೆ.
ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಸಾಗಾಟದ ಬಗ್ಗೆ ಈಗಾಗಲೇ ವಿಧಾನ ಸಭೆಯಲ್ಲಿ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಜಿಲ್ಲೆಯ ಇತರ ಶಾಸಕರು ಮೂಲಕ ಚರ್ಚೆ ನಡೆದಿದ್ದು 15 ದಿನಗಳೊಲಗಾಗಿ ಸಮಸ್ಯೆಯನ್ನು ಇತ್ಯರ್ಥ ಪಡಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಪ್ರಸ್ತುತ ಕಲ್ಲು ಸಾಗಾಟವಿಲ್ಲದೆ ಮನೆ, ಕಟ್ಟಡ ನಿರ್ಮಿಸಲು ಅಸಾಧ್ಯವಾಗಿರುತ್ತದೆ. ಇದರಿಂದಾಗಿ ಕಾರ್ಮಿಕರಿಗೆ ಕೆಲಸವಿಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಲ್ಲು ಸಾಗಾಟಕ್ಕೆ ಯಾವುದೇ ರೀತಿಯಲ್ಲಿ ತೊಂದರೆ ನೀಡದಂತೆ ಮನವಿಯಲ್ಲಿ ವಿನಂತಿಸಿದ್ದಾರೆ. ತಹಶೀಲ್ದಾರ್‌ರವರ ಅನುಪಸ್ಥಿತಿಯಲ್ಲಿ ಉಪ ತಹಶೀಲ್ದಾರ್ ಸುಲೋಚನಾ ಪಿ.ಕೆಯವರಿಗೆ ಮನವಿ ಸಲ್ಲಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರೂನ್ ಸಿಕ್ವೇರಾ, ಕಾರ್ಯದರ್ಶಿ ಬಾತಿಷ ಸಾಲ್ಮರ, ಸೇವಾದಳದ ಅಧ್ಯಕ್ಷ ವಿಶ್ವಜಿತ್ ಅಮ್ಮುಂಜ ಉಪಸ್ಥಿತರಿದ್ದರು.