ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಶಾಲೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಧ್ವಜಾರೋಹಣಗೈದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ, ಎಲ್ಲರ ಒಗ್ಗಟ್ಟಿನಿಂದಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ವಿದ್ಯಾರ್ಥಿಗಳೆಲ್ಲರೂ ಉತ್ತಮ ಮೌಲ್ಯಗಳನ್ನು ರೂಢಿಸಿಕೊಂಡು ದೇಶ ರಕ್ಷಣೆಯ ಚಿಂತನೆ ಮಾಡಬೇಕೆಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಯೋಧ ರಾಧಾಕೃಷ್ಣ ಎ., ಅವರು ಸ್ವಾತಂತ್ರ್ಯದ ನೆನಪನ್ನು ಮೆಲುಕು ಹಾಕುತ್ತಾ, ನಮ್ಮ ದೇಶ ಸುಂದರ ದೇಶ. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಹೆಮ್ಮೆಯ ಸೈನಿಕರ ಏಕತಾ ಮನೋಭಾವದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬರಲು ಅನೇಕ ಸೈನಿಕರು ತಮ್ಮ ಪ್ರಯತ್ನ-ತ್ಯಾಗ ಮಾಡಿದ್ದಾರೆ. ಇದು ಈ ದೇಶದ ಸೈನಿಕರಿಗೆ ಕೊಟ್ಟ ಗೌರವ ಎಂದು, ಗೌರವ ಸ್ವೀಕರಿಸಿ ಮಾತನಾಡಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಗಿರೀಶ್ ಎ.ಪಿ. ಇವರು ಮಾತನಾಡಿ, ವಿದ್ಯಾರ್ಥಿಗಳೆಲ್ಲರೂ ದೇಶಭಿಮಾನ ಬೆಳೆಸಿಕೊಳ್ಳಬೇಕು. ಈ ಪುಣ್ಯ ದಿನದಂದು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರನ್ನು ನೆನೆದುಕೊಂಡು ಐಕ್ಯತೆಯಿಂದ ಬದುಕಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಜೊತೆ ಕಾರ್ಯದರ್ಶಿ ಅನಿತಾ, ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನಿವೃತ್ತ ಯೋಧ ರಾಧಾಕೃಷ್ಣ ಎ ಇವರನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು. ಸಹಶಿಕ್ಷಕರಾದ ಸಂಗಮೇಶ್ ಕತ್ತಿ, ಶ್ರೀಹಿತ ಹಾಗೂ ವಿದ್ಯಾರ್ಥಿಗಳಾದ ಅನ್ವಿತ, ಸಾನ್ವಿ, ಜಾಹ್ನವಿ, ಶರಣ್ಯ ಶೆಟ್ಟಿ, ಸುಮುಕ್, ರಕ್ಷಾ ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ದೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ರಾಷ್ಟ್ರಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್.ಸ್ವಾಗತಿಸಿದರು. ವಸಂತ ಹಾಗೂ ಜಯಶ್ರೀ ಎಂ.ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ.ವಂದಿಸಿದರು. ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿ ಪೋಷಕರು, ಶಿಕ್ಷಕ-ಶಿಕ್ಷಕೇತರ ವೃಂದದವರು ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚಲಾಯಿತು. ನಿಲಯ ವ್ಯವಸ್ಥಾಪಕರು, ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.