





ಇತ್ತೀಚೆಗೆ ನಾಡಿನ ಕ್ರೀಡಾಪಟುಗಳಿಂದ ಅತ್ಯುತ್ತಮ ಸಾಧನೆ : ಬಾಲಕೃಷ್ಣ ಬೋರ್ಕರ್


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಹಾಗೂ ಜಿಲ್ಲಾ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾಟ ದರ್ಬೆಯ ಆಫಿಸರ್ಸ್ ಕ್ಲಬ್ನಲ್ಲಿ ಬುಧವಾರ ನಡೆಯಿತು.





ಪಂದ್ಯಾಟವನ್ನು ಉದ್ಘಾಟಿಸಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯ ಬಾಲಕೃಷ್ಣ ಬೋರ್ಕರ್ ಮಾತನಾಡಿ ಕ್ರೀಡೆಗಳಲ್ಲಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಎಂಬ ಎರಡು ವಿಧ. ಇತ್ತೀಚಿಗೆ ಒಳಾಂಗಣ ಕ್ರೀಡೆಗಳಲ್ಲಿ ನಮ್ಮ ನಾಡಿನ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲೂ ಉತ್ತಮವಾದ ಸಾಧನೆಯನ್ನು ಮಾಡುತ್ತಿದ್ದಾರೆ. ಹಿಂದಿನ ಕಾಲದಲ್ಲಿ ಗ್ರಾಮೀಣ ಕ್ರೀಡೆಗಳ ಬಗ್ಗೆ ಮಾತ್ರ ಪರಿಚಯವಿತ್ತು. ಆದರೆ ಈಗ ಎಲ್ಲಾ ಬಗೆಯ ಕ್ರೀಡೆಗಳು ನಮ್ಮ ಸುತ್ತಮುತ್ತಲೇ ನಡೆಯುತ್ತಿರುತ್ತವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಕ್ರೀಡೆಯಲ್ಲಿ ಪ್ರತಿಯೊಬ್ಬರೂ ಸ್ಪರ್ಧಾ ಮನೋಭಾವದಿಂದ ಭಾಗವಹಿಸಬೇಕು. ಇಲ್ಲಿ ಸೋಲು ಗೆಲುವಿನ ಪ್ರಶ್ನೆಯಲ್ಲ, ಸೋಲೇ ಗೆಲುವಿನ ಮೆಟ್ಟಿಲು. ಸೋಲು ಬಂದಾಗ ಕುಗ್ಗದೆ ಗೆಲುವು ಬಂದಾಗ ಹಿಗ್ಗದೆ ಮುನ್ನಡೆಯುವುದೇ ನಿಜವಾದ ಸಾಧಕನ ಧರ್ಮ. ಪ್ರತಿಯೊಬ್ಬರಲ್ಲೂ ಪ್ರತಿಭೆ ಇದೆ, ಕ್ರೀಡಾ ಕ್ಷೇತ್ರದಲ್ಲಿ ಭಾರತವನ್ನು ಮತ್ತೆ ಎತ್ತಿ ಹಿಡಿಯುವ ಕಾರ್ಯ ವಿದ್ಯಾರ್ಥಿಗಳಿಂದ ಆಗಬೇಕು ಎಂದು ನುಡಿದರು.
ವೇದಿಕೆಯಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ, ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್., ಪಾಣಾಜೆಯ ದ.ಕ.ಜಿ.ಪ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ್ ರೈ ಹಾಗು ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸಂತೋ? ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ದೃತಿ, ಹಂಸಿನಿ ಮತ್ತು ನಿಧಿ ಪ್ರಾರ್ಥನೆಗೈದು, ಅಂಬಿಕಾ ಸಂಸ್ಥೆಯ ಜೀವಶಾಸ್ತ್ರ ಉಪನ್ಯಾಸಕ ವಿಷ್ಣು ಪ್ರದೀಪ್ ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಜೀವಿತ ಕಾರ್ಯಕ್ರಮ ನಿರೂಪಿಸಿದರು. ಬಾಲಕರ ವಿಭಾಗದಲ್ಲಿ ಒಟ್ಟು 9 ತಂಡಗಳು ಹಾಗೆ ಬಾಲಕಿಯರ ವಿಭಾಗದಲ್ಲಿ 6 ತಂಡಗಳು ಭಾಗವಹಿಸಿದ್ದವು.
ಫಲಿತಾಂಶ
ಬಾಲಕರ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಪ್ರಥಮ, ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ನೆಹರು ನಗರ ಪ್ರಥಮ, ನರೇಂದ್ರ ಪದವಿ ಪೂರ್ವ ಕಾಲೇಜು ತೆಂಕಿಲ ದ್ವಿತೀಯ ಸ್ಥಾನವನ್ನು ಪಡೆದುಕೊಂಡವು.










