ವಿದ್ಯಾರ್ಥಿ ದಿಸೆಯಲ್ಲಿ ನಾಯಕತ್ವ ಬೆಳೆಯಲಿ: ಕಿಶೋರ್ ಕುಮಾರ್ ಬೋಟ್ಯಾಡಿ

ಪುತ್ತೂರು: ಇಂದು ನಮ್ಮ ಭಾರತ ದೇಶವು ತಾಂಂತ್ರಿಕ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಬಹಳಷ್ಟು ಮುಂದುವರೆದಿದೆ. ವಿಶ್ವದಲ್ಲಿಯೇ ವಿಶಿಷ್ಟ ಸ್ಥಾನವನ್ನು ಹೊಂದಿರುವ ಭಾರತ ಇಂದು ಜಾಗತಿಕ ನಾಯಕನಾಗುವ ಹಂತದಲ್ಲಿದೆ. ಅದಕ್ಕೆ ತಕ್ಕಂತೆ ಸಮಾಜಕ್ಕೆ ಯುವ ನಾಯಕರ ಅವಶ್ಯಕತೆ ಇದೆ. ಅದು ಕಾಲೇಜು ಮಟ್ಟದಿಂದಲೇ ಬೆಳೆಸಿಕೊಂಡಾಗ ಮುಂದೆ ಎಲ್ಲಾ ರಂಗದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿ ದಿಸೆಯಲ್ಲಿಯೇ ಇಂತಹ ವಿದ್ಯಾರ್ಥಿ ಸಂಘದ ಮೂಲಕ ನಾಯಕತ್ವ ಬೆಳೆಯಲಿ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೋಟ್ಯಾಡಿ ಹೇಳಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ 2025-26ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಕ್ಷ ಣದ ಜೊತೆಗೆ ಗುಣ, ನಡತೆ ಮುಖ್ಯ. ಸಂಸ್ಕ್ರತಿ ಇಲ್ಲದಿದ್ದರೆ ಸಮಾಜದಲ್ಲಿ ಬೆಲೆ ಇಲ್ಲ. ಅಂತಹ ಗುಣ, ನಡತೆ, ಸಂಸ್ಕ್ರತಿಯ ಪರಿಚಯವನ್ನು ಶ್ರೇಷ್ಠ ಕಾನೂನು ಶಿಕ್ಷಣದ ಜೊತೆಗೆ ನೀಡುವ ಕಾರ್ಯವನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಮಾಡುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುರೇಂದ್ರ ಕಿಣಿ ಜಿ. ಮಾತನಾಡಿ, ಶಿಕ್ಷಣವೆಂಬುದು ಓದು-ಬರಹಕ್ಕೆ ಮಾತ್ರವೇ ಸೀಮಿತಗೊಳ್ಳದೇ ಒಟ್ಟಾರೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಬೇಕಿದೆ.

ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘವು ನಿಮ್ಮ ನಾಯಕತ್ವದ ಗುಣಗಳನ್ನು ಬೆಳೆಸುವ ಬಹುದೊಡ್ಡ ವೇದಿಕೆಯಾಗಿದೆ. ಅದನ್ನು ಸರಿಯಾಗಿ ಬಳಸಿಕೊಳ್ಳಿ ಎಂದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಚಾಲಕರಾದ ವಿಜಯನಾರಾಯಣ ಕೆ. ಎಂ. ಮಾತನಾಡಿ ಶುಭಹಾರೈಸಿದರು.

ಇದೇ ವೇಳೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸಂಧ್ಯಾ ಪಿ. ಎಂ. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ.ಕೆ. ರವೀಂದ್ರ, ಪ್ರಾಂಶುಪಾಲರಾದ ಅಕ್ಷತಾ ಎ.ಪಿ., ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಪ್ರಿಯಾ ಎಸ್. ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಜಿತ್ ಶ್ಯಾಮ್ ಸಿ. ಕೆ. ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ವೇಗನ್ ಎ. ಎಲ್. ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ವರ್ಷಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು, ವಕೀಲರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸನ್ಮಾನ ಕಾರ್ಯಕ್ರಮ:
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದ ಎಂ.ಎಲ್.ಸಿ. ಕಿಶೋರ್ ಕುಮಾರ್ ಬೋಟ್ಯಾಡಿಯವರನ್ನು ಇದೇ ವೇಳೆ ಮಹಾವಿದ್ಯಾಲಯದ ವತಿಯಿಂದ ಸನ್ಮಾನಿಸಲಾಯಿತು. ಜೊತೆಗೆ ಈ ಬಾರಿಯ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನಡೆದ ಗಣೇಶೋತ್ಸವದ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ನವೀನ್ ಕುಮಾರ್ ಎಂ. ಕೆ. ಅವರನ್ನು ಸನ್ಮಾನಿಸಲಾಯಿತು.