
ರಾಮಕುಂಜ: ಇಲ್ಲಿನ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕ ಸತೀಶ್ ಭಟ್ರವರಿಗೆ ಅಭಿನಂದನಾ ಕಾರ್ಯಕ್ರಮದ ಪ್ರಯುಕ್ತ ಅಂತರ್ರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಖ್ಯಾತಿಯ ಆಳ್ವಾಸ್ ಸಾಂಸ್ಕೃತಿಕ ವೈಭವ ಸೆ.27ರಂದು ರಾತ್ರಿ ಶ್ರೀ ರಾಮಕುಂಜೇಶ್ವರ ಕ್ರೀಡಾಂಗಣದಲ್ಲಿ ನಡೆಯಿತು.

ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 350 ವಿದ್ಯಾರ್ಥಿಗಳು ಸುಮಾರು 2 ಗಂಟೆಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಗುಜರಾತಿನ ಗಾರ್ಭನೃತ್ಯ ಮತ್ತು ದಾಂಡಿಯ, ಬಡಗುತಿಟ್ಟು ಯಕ್ಷಗಾನ ಶ್ರೀರಾಮ ಪಟ್ಟಾಭಿಷೇಕ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಪುರುಲಿಯಾ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಡೊಳ್ಳುಕುಣಿತ, ಸೃಜನಾತ್ಮಕ ನೃತ್ಯ, ಕಥಕ್ ನೃತ್ಯ ವರ್ಷಧಾರೆ, ಶಾಸ್ತ್ರೀಯ ನೃತ್ಯ-ನವದುರ್ಗೆಯರು ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.