ಪುತ್ತೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಾದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಸಹಿತ ಹಲವರ ವಿರುದ್ಧ ಕೊಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ. ಅರುಣ್ ಕೆ. ತಿಳಿಸಿದ್ದಾರೆ.
ಮೇ.27ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ. ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್, ಶಿವಪ್ರಸಾದ್ ತುಂಬೆ, ಪ್ರದೀಪ, ಶಾಹಿತ್, ಸಚಿನ್ ರೊಟ್ಟಿಗುಡ್ಡೆ, ರಂಜಿತ್ ಎಂಬವರನ್ನು ಬಂಧಿಸಿದ್ದರು. ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ, ಬಜರಂಗದಳದ ಪುತ್ತೂರು ಜಿಲ್ಲಾ ಸಂಚಾಲಕ, ಪುದು ಗ್ರಾಮದ ಭರತ್ ರಾಜ್ ಯಾನೆ ಭರತ್ ಕುಮ್ಡೇಲು (29) ತಲೆ ಮರೆಸಿಕೊಂಡಿದ್ದು, ಆತನ ಬಂಧನವಾಗಲು ಬಾಕಿ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಲವು ವರ್ಷಗಳಿಂದ ಕೊಲೆ, ಕೊಲೆಯತ್ನ, ಪ್ರಚೋದನಕಾರಿ ಭಾಷಣಗಳು ಸಹಿತ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ. ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (THE KARNATAKA CONTROL OF ORGANISED CRIME ACT& 2000)ರಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.