ಪುತ್ತೂರು: ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ ಕೋಟ ಶಿವರಾಮ ಕಾರಂತರ ಬಾಲವನ ಪುತ್ತೂರು, ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಅ.10ರಿಂದ ಬಾಲವನ ಬಯಲು ರಂಗ ಮಂದಿರದಲ್ಲಿ ಡಾ ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ ಮತ್ತು ಡಾ ಕೋಟ ಶಿವರಾಮ ಕಾರಂತರ ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಶಾಸಕ ಅಶೋಕ್ ಕುಮಾರ್ ರೈ ಅವರು ಡಾ. ಶಿವರಾಮ ಕಾರಂತರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾರಂತರ ಮನೆಯಲ್ಲಿ ಇರಿಸಲಾದ ಜ್ಞಾನಪೀಠ ಪ್ರಶಸ್ತಿಯ ಮುಂದೆ ದೀಪ ಪ್ರಜ್ವಲಿಸಿ ಡಾ.ಶಿವರಾಮ ಕಾರಂತರ ಜನ್ಮದಿನಾಚರಣೆ ಆಚರಿಸಲಾಯಿತು. ಬಳಿಕ ಬಯಲು ರಂಗ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಡಾ.ವಿವೇಕ್ ರೈ ಮತ್ತು ಶಿಕ್ಷಣ ತಜ್ಞ ಸುಕುಮಾರ ಗೌಡ ಅವರಿಗೆ ಬಾಲವನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗಿಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಡಾ|ಬಿ.ಎ.ವಿವೇಕ್ ರೈರವರ ಬಗ್ಗೆ ಮುಂಬಯಿ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ತಾಳ್ತಜೆ ವಸಂತ ಕುಮಾರ್ ಅಭಿನಂದನಾ ಭಾಷಣ ಮಾಡಿದರು. ಡಾ|ಎನ್.ಸುಕುಮಾರ ಗೌಡರವರ ಬಗ್ಗೆ ನಿವೃತ್ತ ಪ್ರಾಂಶುಪಾಲರಾದ ಪ್ರೊ.ಕ್ಸೇವಿಯರ್ ಡಿಸೋಜರವರು ಅಭಿನಂದನಾ ಭಾಷಣ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷ ಉಮೇಶ್ ನಾಯಕ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸಾಹಿತಿ ಶಾಂತಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಗೀತ ಶಿಕ್ಷಕರಾದ ಶುಭಾರಾವ್, ಪವಿತ್ರ ರೂಪೇಶ್ ನಾಡಗೀತೆ ಮತ್ತು ರೈತ ಗೀತೆಯನ್ನು ಹಾಡಿದರು.


ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಜಗನ್ನಾಥ ಅರಿಯಡ್ಕ ವಂದಿಸಿದರು. ರಮೇಶ್ ಉಳಯ ಕಾರ್ಯಕ್ರಮ ನಿರೂಪಿಸಿದರು.