ವಿಟ್ಲ: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರುವಾಯಿ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರವರು ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಪೆರುವಾಯಿ ಗ್ರಾಮದ ನಿವಾಸಿಯಾಗಿರುವ 75 ವರ್ಷದ ವ್ಯಕ್ತಿಯೋರ್ವರು ತನ್ನ ಜಮೀನಿಗೆ ಸರಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕೊಳವೆ ಬಾವಿ ಮಾಡಿ ಕೊಡುವಂತೆ ಮನವಿ ಮಾಡಿದ್ದರು. ಕೊಳವೆ ಬಾವಿ ಮಂಜೂರು ಮಾಡಲು ಹಣ ನೀಡುವಂತೆ ಗ್ರಾ.ಪಂ ಅಧ್ಯಕ್ಷೆ ನೆಫಿಸಾರವರು ಬೇಡಿಕೆಯೊಡ್ಡಿದ್ದರು ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳ ತಂಡ ಸೆ.6ರಂದು ದಾಳಿ ನಡೆಸಿ ಅಧ್ಯಕ್ಷೆ ನೆಫಿಸಾ ಹಾಗೂ ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರೂ ಆರೋಪಿಗಳು ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಇದೀಗ ಬಿಲ್ ಕಲೆಕ್ಟರ್ ವಿಲಿಯಂ ಅದರನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರವರು ಮೇಲಾಧಿಕಾರಿಗಳ ಆದೇಶದಂತೆ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಪದಚ್ಯುತಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಅ.21ರಂದು ಬೃಹತ್ ಪ್ರತಿಭಟನೆ ನಡೆಯಲಿದೆ.