ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ – 2025 ಸ್ಪರ್ಧೆಯು ಅ.18ರಂದು ಸಂತ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪುತ್ತೂರು ತಾಲೂಕು ಕ್ರೀಡಾ ಸಂಯೋಜಕರು ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರಾದ ಡಾ. ಜ್ಯೋತಿ ಮತ್ತು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಕ್ರೀಡಾಪಟುಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು.

ತಾಲೂಕು ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ವೈಯಕ್ತಿಕ ಚಾಂಪಿಯನ್ ನ್ನು ಸಂತ ಫಿಲೋಮಿನಾ ಪ.ಪೂ ಕಾಲೇಜಿನ ರೋಹನ್ ಬೋಪಣ್ಣ, ಅಭಿನ್ ಗೌಡ ಹಾಗೂ ವಿವೇಕಾನಂದ ಪ. ಪೂ ಕಾಲೇಜಿನ ಮಿಲನ್ ಮತ್ತು ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಪ. ಪೂ ಕಾಲೇಜಿನ ಡಿಂಪಲ್ ಶೆಟ್ಟಿ ಪಡೆದುಕೊಂಡಿರುತ್ತಾರೆ. ಬಾಲಕ ಹಾಗೂ ಬಾಲಕಿಯರ ವಿಭಾಗದ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸಂತ ಫಿಲೋಮಿನಾ ಪ. ಪೂ ಕಾಲೇಜು ಹಾಗೂ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ವಿವೇಕಾನಂದ ಪ. ಪೂ ಕಾಲೇಜು ಪಡೆದುಕೊಂಡಿರುತ್ತದೆ.
ಪುತ್ತೂರು ತಾಲೂಕು ಮಟ್ಟದ ಒಟ್ಟು 8 ಪ. ಪೂ ಕಾಲೇಜಿನ 135 ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ತಾಲೂಕಿನ ವಿವಿಧ ಕಾಲೇಜಿನ ದೈಹಿಕ ಶಿಕ್ಷಕರು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಏಲಿಯಾಸ್ ಪಿಂಟೋ, ರಾಜೇಶ್ ಮೂಲ್ಯ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕರಾದ ಲವೀಶಾ ಡಿ ಕುನ್ಹಾ ವಂದಿಸಿ, ಸವಿತಾ ಮೋಂತೇರೋ ಕಾರ್ಯಕ್ರಮವನ್ನು ನಿರೂಪಿಸಿದರು.