





ಪುತ್ತೂರು: ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ, ಅವಮಾನಕಾರಿ ಭಾಷಣ ಮಾಡಿರುವ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪರೀಕ್ಷಣಾ ಜಾಮೀನು ಕೋರಿ ಆರ್‌ಎಸ್ ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ.10ಕ್ಕೆ ಮುಂದೂಡಿಕೆಯಾಗಿದೆ.


ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರಕಾರಿ ಅಭಿಯೋಜಕಿ ಶ್ರೀಮತಿ ಜಯಂತಿ ಎಸ್ .ಭಟ್ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಬಿಎನ್ಎಸ್ ಸೆಕ್ಷನ್ 338,339ರಡಿ ದೂರುದಾರೆ ಈಶ್ವರಿ ಪದ್ಮುಂಜ ಅವರ ಪರ ವಕೀಲ ಪಿ.ಕೆ.ಸತೀಶನ್‌ರವರು, ಪ್ರಾಸಿಕ್ಯೂಶನ್ ಜೊತೆ ದೂರುದಾರರಿಗೂ ವಾದ ಮಂಡನೆಗೆ ಅವಕಾಶ ಕೋರಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರ ಡಾ.ಪ್ರಭಾಕರ ಭಟ್ ಅವರ ವಕೀಲ ಮಹೇಶ್ ಕಜೆ ಅವರು ಕಾಲಾವಕಾಶ ಕೋರಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ನ್ಯಾಯಾಲಯ ನ.10ಕ್ಕೆ ಮುಂದೂಡಿದೆ.





ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆಯಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಡಾ.ಪ್ರಭಾಕರ ಭಟ್ ದ್ವೇಷದ ಮತ್ತು ಮಹಿಳೆಯರ ವಿರುದ್ಧ ಅವಮಾನಕಾರಿಯಾದ ಭಾಷಣ ಮಾಡಿದ್ದಾರೆಂದು ಆರೋಪಿಸಿ ಜನವಾದಿ ಮಹಿಳಾ ಸಂಘಟನೆಯ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ಡಾ.ಪ್ರಭಾಕರ ಭಟ್ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಬಿಎನ್ಎಸ್ 79, 196, 299, 302 ಹಾಗೂ 3(5) ಕಲಂ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಅ.30ರಂದು ವಿಚಾರಣೆಗೆ ಹಾಜರಾಗುವಂತೆ ಡಾ.ಪ್ರಭಾಕರ ಭಟ್ ಅವರಿಗೆ ನೊಟೀಸ್ ಜಾರಿ ಮಾಡಿದ್ದರು. ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಡಾ.ಪ್ರಭಾಕರ ಭಟ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಅ.27ರಂದು ವಿಚಾರಣೆಗೆತ್ತಿಕೊಂಡಿದ್ದ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿ, ಮುಂದಿನ ಆದೇಶದ ತನಕ ಅರ್ಜಿದಾರ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಅ.29ಕ್ಕೆ ಮುಂದೂಡಿತ್ತು.ಅ.29ರಂದು ವಿಚಾರಣೆ ವೇಳೆ ದೂರುದಾರೆ ಈಶ್ವರಿ ಪದ್ಮುಂಜ ಅವರ ಪರ ಹಿರಿಯ ನ್ಯಾಯವಾದಿ ಪಿ.ಕೆ.ಸತೀಶನ್ ಅವರು, ಬಿಎನ್‌ಎಸ್ಎಸ್ ಸೆಕ್ಷನ್ 338,339ರಡಿ ದೂರುದಾರರಿಗೂ ವಾದ ಮಂಡನೆಗೆ ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಸರಕಾರಿ ಅಭಿಯೋಜಕರಾದ ಶ್ರೀಮತಿ ಜಯಂತಿ ಎಸ್.ಭಟ್ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಡಾ.ಪ್ರಭಾಕರ ಭಟ್ ಅವರಿಗೆ ನೀಡಿರುವ ಮಧ್ಯಂತರ ಜಾಮೀನನ್ನು ವಿಸ್ತರಣೆ ಮಾಡಬೇಕು ಎಂದು ಅವರ ಪರ ವಕೀಲ ಮಹೇಶ್ ಕಜೆ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.ನಿರೀಕ್ಷಣಾ ಜಾಮೀನು ಅರ್ಜಿಯ ಅಂತಿಮ ವಿಲೇವಾರಿ ತನಕ ಮಧ್ಯಂತರ ಜಾಮೀನು ವಿಸ್ತರಿಸಿ ಆದೇಶಿಸಿದ ನ್ಯಾಯಾಲಯ, ಸರಕಾರಿ ಅಭಿಯೋಜಕರು ಮತ್ತು ದೂರುದಾರರ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿ ವಿಚಾರಣೆಯನ್ನು ನ.4ಕ್ಕೆ ಮುಂದೂಡಿತ್ತು.ನ.4ರಂದು ವಿಚಾರಣೆ ಸಂದರ್ಭ, ಬಿಎನ್ಎಸ್‌ಸ್ ಸೆಕ್ಷನ್ 338,339ರಡಿ ದೂರುದಾರೆ ಈಶ್ವರಿ ಪದ್ಮುಂಜ ಅವರ ಪರ ವಕೀಲರು ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಡಾ.ಪ್ರಭಾಕರ ಭಟ್ ಅವರ ಪರ ವಕೀಲ ಮಹೇಶ್ ಕಜೆ ಅವರು ಕಾಲಾವಕಾಶ ಕೋರಿ ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ನ.10ಕ್ಕೆ ಮುಂದೂಡಿದೆ.










