ರಾಮಕುಂಜ: ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೆಂಗಳೂರು ಉತ್ತರ ವಲಯ-1 ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ಬಸವೇಶ್ವರ ನಗರದ ಡಾ| ಬಿ.ಆರ್.ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡು ಊರಿಗೆ ಆಗಮಿಸಿದ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲಾ ತಂಡದ ಆಟಗಾರರಿಗೆ ಅದ್ದೂರಿ ಸ್ವಾಗತ ನೀಡಲಾಯಿತು.

ಬೆಂಗಳೂರಿನಿಂದ ಆಗಮಿಸಿದ ಆಟಗಾರರಿಗೆ ಆತೂರು ಜಂಕ್ಷನ್ನಲ್ಲಿ ಮಾಲಾರ್ಪಣೆ ಮಾಡಿ ಸ್ವಾಗತ ಕೋರಲಾಯಿತು. ಬಳಿಕ ಅಲ್ಲಿಂದ ತೆರೆದ ವಾಹನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾರೈ, ತರಬೇತುದಾರ ಜಸ್ವಂತ್ ಹಾಗೂ ತಂಡದ ಆಟಗಾರ್ತಿಯರಾದ ಧನ್ವಿ, ರಮ್ಯಾ ಕೆ. ಎಸ್., ದೀಕ್ಷಾ ಎಸ್., ತನುಜಾ ಅಪಸಾಬ, ಪ್ರತಿಕ್ಷಾ, ಸಿಂಚನ ಎಸ್ ಹಾಗೂ ದೀಕ್ಷಶ್ರೀ ಅವರನ್ನು ಚೆಂಡೆ ವಾದ್ಯಗಳ ಅದ್ದೂರಿ ಮೆರವಣಿಗೆಯಲ್ಲಿ ಶಾಲಾ ಸಭಾಂಗಣಕ್ಕೆ ಕರೆತರಲಾಯಿತು.
ಎಸ್ಆರ್ಕೆ ಲ್ಯಾಡರ್ಸ್ನ ಕೇಶವ ಅಮೈ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಕೋಶಾಧಿಕಾರಿ ಸೇಸಪ್ಪ ರೈ, ಸದಸ್ಯ ಲಕ್ಷ್ಮೀನಾರಾಯಣ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ.ಎಂ.ಬಿ., ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತ, ಉಪಾಧ್ಯಕ್ಷ ಕೇಶವ ಗಾಂಧಿಪೇಟೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ್ ಕೊಯಿಲ, ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕೆ., ಪ್ರೌಢಶಾಲಾ ವಿಭಾಗದ ಮುಖ್ಯಗುರು ಸತೀಶ್ ಭಟ್ ಮತ್ತಿತರರ ಪ್ರಮುಖರು ಶುಭಹಾರೈಸಿದರು. ಮುಖ್ಯಗುರು ಸತೀಶ್ ಭಟ್ ಸ್ವಾಗತಿಸಿದರು. ಶಿಕ್ಷಕಿ ಉಷಾ ಕುಮಾರಿ ವಂದಿಸಿದರು.
ಈ ಸಂದರ್ಭದಲ್ಲಿ ಪ.ಪೂ.ಕಾಲೇಜು ಮತ್ತು ಪ್ರೌಢಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿನಿಯರ ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.