ಪುತ್ತೂರು: ಸುಮಾರು 1 ತಿಂಗಳ ಹಿಂದೆ ನಿರ್ಮಾಣ ಹಂತದ ಮನೆಯ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಚಿಕಿತ್ಸೆಗೆ ಸ್ಪಂದಿಸದೆ ನ.17ರಂದು ಮೃತಪಟ್ಟಿದ್ದಾರೆ.
ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ರೆಂಜಾಲ ನಿವಾಸಿ ಪ್ರಮೋದ್ ಗೌಡ(38ವ.)ಮೃತಪಟ್ಟವರಾಗಿದ್ದಾರೆ. ಇವರು ಅ.10ರಂದು ಬೆಳಿಗ್ಗೆ ಮಂಜುಕಿರಣ್, ಚೇತನ್ ಎಂಬವರ ಜೊತೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಣೆಕ್ಕರ ಸುಧೀರ್ ರೈ ಎಂಬವರ ನಿರ್ಮಾಣ ಹಂತದ ಮನೆಯ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಸುಮಾರು 15 ಅಡಿ ಎತ್ತರದಿಂದ ನೆಲಕ್ಕೆ ಬಿದ್ದು ಗಾಯಗೊಂಡಿದ್ದರು. ಗಾಯಾಳುವನ್ನು ಜೊತೆಯಲ್ಲಿ ಕೆಲಸ ಮಾಡುತ್ತಿದ್ದವರು ಆಟೋ ರಿಕ್ಷಾವೊಂದರಲ್ಲಿ ಪದ್ಮುಂಜ ಆಸ್ಪತ್ರೆಗೆ ಕರೆ ತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆ ಎಸ್ಡಿಎಮ್ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ, ನಂತರ ವೆನ್ಲಾಕ್ ಆಸ್ಪತ್ರೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಯಲ್ಲಿದ್ದ ಪ್ರಮೋದ್ ಗೌಡ ಅವರು ನ.17ರಂದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮೃತ ಪ್ರಮೋದ್ರವರ ಪತ್ನಿ ಯೋಗಿನಿ ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
