ಪುತ್ತೂರು: ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿ ಕರಾವಳಿ ಭಾಗದ ವಕೀಲರ ನಿಯೋಗ ದ.3ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ. ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಅವಶ್ಯಕತೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಜೊತೆಯಲ್ಲಿ ಚರ್ಚಿಸಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ವಕೀಲರ ನಿಯೋಗದಲ್ಲಿ ಹಿರಿಯ ವಕೀಲರಾದ ಟಿ ಎನ್ ಪೂಜಾರಿ, ನೂರುದ್ದೀನ್ ಸಾಲ್ಮರ, ಎಂ ಆರ್ ಬಲ್ಲಾಳ್, ಯಶವಂತ ಮರೋಲಿ, ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ, ದ.ಕ.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಕೋಸ್ಟ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಿ. ಜಗನ್ನಾಥ ರೈ, ಉಪಾಧ್ಯಕ್ಷ ಮೋನಪ್ಪ, ಕಾರ್ಯದರ್ಶಿ ಚಿನ್ಮಯ ರೈ ಜೊತೆ ಕಾರ್ಯದರ್ಶಿ ಮಮತಾ ಸುವರ್ಣ, ಮೂಡಬಿದ್ರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ಮಹಮ್ಮದ್ ಅಸ್ಕರ್ ಮಂಗಳೂರು ಹಾಗೂ ಕರಾವಳಿ ಜಿಲ್ಲೆಯ ವಿವಿಧ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
