







ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಡಬ ಇದರ ಸಹಯೋಗದೊಂದಿಗೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮ ಕುಟ್ರುಪ್ಪಾಡಿ ಅಮೃತ ಸರೋವರದಲ್ಲಿ ನಡೆಯಿತು.


ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವಲಯದ ಅಧ್ಯಕ್ಷ ಕರುಣಾಕರ ಗೋಗಟೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕಡಬ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಭವಾನಿಶಂಕರ್ ವಹಿಸಿದ್ದರು. ಕಡಬ ತಾಲೂಕಿನ ಆರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಬ್ಯಾಗ್ ವಿತರಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ರವರು ಮಾತನಾಡಿ, ಶ್ರೀ ಕ್ಷೇತ್ರದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸಮಾಜಮುಖಿಯಾದ ಹಲವಾರು ಕಾರ್ಯಕ್ರಮ ಸೃಷ್ಟಿಸಿದ್ದಾರೆ. ಅವರ ಕಲ್ಪನೆಯಲ್ಲಿ ಮೂಡಿಬಂದ ಸ್ಥಳೀಯ ಮಟ್ಟದಲ್ಲಿ ಸರಕಾರದ ವ್ಯವಸ್ಥೆಯೊಂದಿಗೆ ಹೊಂದಿಕೊಂಡು ವಿಪತ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಪೂರಕವಾಗಿ ಹಮ್ಮಿಕೊಂಡ ವಿನೂತನ ಕಾರ್ಯಕ್ರಮವೇ ಶೌರ್ಯ ವಿಪತ್ತು ನಿರ್ವಹಣಾ ಘಟಕ. ಈ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸೇವಾ ಮನೋಭಾವನೆಗಳೊಂದಿಗೆ ಹಲವಾರು ಸಾಮಾಜಿಕ ವಿಪತ್ತು ಸೇವೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ ಎಂದರು.



ಅತಿಥಿಯಾಗಿದ್ದ ಉಪವಲಯ ಅರಣ್ಯಾಧಿಕಾರಿ ಚಿದಾನಂದರವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಕಾರ್ಯವನ್ನು ಶ್ಲಾಘಿಸಿ ತಮ್ಮ ಇಲಾಖೆಯಿಂದ ಸಾಧ್ಯವಾದಷ್ಟು ಸಹಕಾರ ನೀಡುವುದಾಗಿ ತಿಳಿಸಿದರು. ನೆಲ್ಯಾಡಿ ವಲಯದ ಉಪವಲಯಾರಣ್ಯಾಧಿಕಾರಿ ಸುಬ್ರಹ್ಮಣ್ಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಸದಸ್ಯ ಶಿವಪ್ರಸಾದ್ ಮೈಲೇರಿ, ಕುಟ್ರುಪಾಡಿ ಗ್ರಾ.ಪಂ.ಅಧ್ಯಕ್ಷೆ ಸುಮನ, ಅಭಿವೃದ್ಧಿ ಅಧಿಕಾರಿ ಆನಂದ ಗೌಡ ಎ, ಕಡಬ ವಲಯ ಒಕ್ಕೂಟ ಅಧ್ಯಕ್ಷ ರಮೇಶ್ ರೈ ಅರ್ಪಜೆ ಸಂದರ್ಭೋಚಿತವಾಗಿ ಮಾತನಾಡಿದರು.
ಕಡಬ ಒಕ್ಕೂಟದ ಅಧ್ಯಕ್ಷೆ ನಳಿನಿ ರೈ, ಕುಟ್ರುಪ್ಪಾಡಿ ಗ್ರಾ.ಪಂ.ಸದಸ್ಯರಾದ ಲಕ್ಷ್ಮೀಶ ಬಂಗೇರ, ಮೋಹನ್ ಕೆರೆಕ್ಕೋಡಿ, ಕಡಬ ವಲಯದ ಭಜನಾ ಪರಿಷತ್ ಅಧ್ಯಕ್ಷ ರಮೇಶ್ ಅಡಿಲು, ಜನಜಾಗೃತಿ ವೇದಿಕೆಯ ಸದಸ್ಯರು, ಒಕ್ಕೂಟ ಅಧ್ಯಕ್ಷರು, ಸಂಘದ ಸದಸ್ಯರು, ಜ್ಞಾನವಿಕಾಸ ಸಮನ್ವಯಾಧಿಕಾರಿ, ಕಡಬ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಸದಸ್ಯರು, ಸೇವಾಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ವಿಜೇಶ್ ಜೈನ್ ವಂದಿಸಿದರು. ಮೇಲ್ವಿಚಾರಕ ರವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ನಳಿನಿ ಕಾರ್ಯಕ್ರಮ ನಿರ್ವಹಿಸಿದರು.










