







ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಸುಲಭವಾಗಿ ಮತ್ತು ಸಕಾಲಕ್ಕೆ ತಲುಪಲು ಪರೀಕ್ಷಾ ದಿನಗಳಂದು ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.


ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆ.28ರಿಂದ ಮಾ.17ರವರೆಗೆ ನಡೆಯಲಿವೆ. ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರದವರೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಯಾವುದೇ ಟಿಕೆಟ್ ಇಲ್ಲದೆ ಪ್ರಯಾಣಿಸಬಹುದಾಗಿದೆ ಎಂದು ನಿಗಮ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು ಈ ಉಚಿತ ಸಾರಿಗೆ ಸೌಲಭ್ಯವನ್ನು ಪಡೆಯಲು ಬಸ್ ನಿರ್ವಾಹಕರಿಗೆ ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸುವುದು ಕಡ್ಡಾಯವಾಗಿದೆ ಎಂದು ನಿಗಮ ಹೇಳಿದೆ.



ಹಾಲ್ ಟಿಕೆಟೇ ಬಸ್ ಪಾಸ್
ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶ ಪತ್ರವನ್ನೇ ಬಸ್ ಪಾಸ್ ಎಂದು ಪರಿಗಣಿಸುವಂತೆ ಕೆಎಸ್‌ಆರ್‌ಟಿಸಿ ತನ್ನ ಎಲ್ಲಾ ಘಟಕಗಳ ಚಾಲಕರು ಮತ್ತು ನಿರ್ವಾಹಕರಿಗೆ ಸೂಚನೆ ನೀಡಿದೆ.ಪರೀಕ್ಷೆ ಬರೆಯಲು ಹೋಗುವಾಗ ಹಾಗೂ ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುವಾಗಲೂ ಈ ಸೌಲಭ್ಯ ಅನ್ವಯವಾಗಲಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳು ಸಾರಿಗೆ ಸಮಸ್ಯೆಯಿಂದಾಗಿ ಪರೀಕ್ಷೆಗೆ ಗೈರಾಗಬಾರದು ಅಥವಾ ವಿಳಂಬವಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಿರುವ ಮಾರ್ಗಗಳಲ್ಲಿ ಹೆಚ್ಚಿನ ಬಸ್‌ಗಳನ್ನು ಹಾಕಲಾಗುವುದು. ಇದರ ಜತೆಗೆ ವಿದ್ಯಾರ್ಥಿಗಳು ಕೈ ತೋರಿಸಿದ ಕಡೆ ಬಸ್ ನಿಲ್ಲಿಸಲು ಚಾಲಕರಿಗೆ ಸೂಚಿಸಲಾಗಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ಅಧಿಕೃತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಯಾವುದೇ ಆತಂಕವಿಲ್ಲದೆ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದೆ. ಈ ನಿರ್ಧಾರವು ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಆರ್ಥಿಕ ಹೊರೆ ತಗ್ಗಿಸಲು ಸಹಕಾರಿಯಾಗಿದೆ.










