







ವಿಟ್ಲ: ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರುಷಗಳಿಂದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಬಂಟ್ವಾಳ ತಾಲೂಕು ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಶ್ ಬಂಧಿತ ಆರೋಪಿ.2019ರಲ್ಲಿ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ಕನ್ಯಾನ ಮೂಲದ ಇಬ್ರಾಹಿಂ ಬಾತೀಶ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ಪ್ರಕರಣದ ವಿಚಾರಣೆ ವೇಳೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಈತನ ಪತ್ತೆಗೆ ವಾರಂಟ್ ಜಾರಿ ಮಾಡಲಾಗಿತ್ತು. ನ್ಯಾಯಾಲಯದ ಆದೇಶದನ್ವಯ ವಿಟ್ಲ ಠಾಣಾ ಪೊಲೀಸರು ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸಿದ್ದರು. ಈವೇಳೆ ಆರೋಪಿ, ವಿದೇಶದಲ್ಲಿರುವುದಾಗಿ ಮಾಹಿತಿ ಲಭಿಸಿತ್ತು. ಫೆ. 24ರಂದು ಇಬ್ರಾಹಿಂ ಬಾತೀಶ್ ವಿದೇಶದಿಂದ ಮರಳಿ ಬರುತ್ತಿದ್ದ ವೇಳೆ ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಅಧಿಕಾರಿಗಳ ಸಹಕಾರದಿಂದ ವಿಟ್ಲ ಪೊಲೀಸರು ಮಂಗಳೂರು ವಿಮಾನ ನಿಲ್ದಾಣದಲ್ಲಿ
ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.










