






ಎಲ್ಲರೂ ಸ್ವ ಉದ್ಯೋಗ ಯೋಜನೆಗಳ ಪ್ರಯೋಜನ ಪಡೆಯಬೇಕು; ಸತೀಶ್ ಕುಂಪಲ


ನೆಲ್ಯಾಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯ ಕಾರ್ಯಕ್ರಮ, ಮಾ.29ರಂದು ಪ್ರಸಾರವಾದ ’ಮನ್ ಕೀ ಬಾತ್’ನ 132ನೇ ಕಂತಿನ ನೇರ ಪ್ರಸಾರವನ್ನು ಬಿಜೆಪಿ ಮುಖಂಡರು ನೆಲ್ಯಾಡಿ ಗ್ರಾಮದ ಪಡುಬೆಟ್ಟು ಕಾಲೋನಿ ನಿವಾಸಿ ಬಾಲಕೃಷ್ಣ ಅವರ ಮನೆಯಲ್ಲಿ ವೀಕ್ಷಣೆ ಮಾಡಿದರು.



ಬಾಲಕೃಷ್ಣ ಅವರ ತಾಯಿ ಭವಾನಿ ಅವರು ದೀಪ ಬೆಳಗಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ದ.ಕ.ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರತಿ ಮೂಲೆಯಲ್ಲಿ ನಡೆಯುವ ವಿದ್ಯಮಾನಗಳ ಕುರಿತು ಸಮಗ್ರ ಮಾಹಿತಿಯನ್ನು ಹೊಂದಿದ್ದು, ಪ್ರತಿ ತಿಂಗಳ ಕೊನೆಯ ಭಾನುವಾರ ಮನ್ ಕೀ ಬಾತ್ ಕಾರ್ಯಕ್ರಮದ ಮೂಲಕ ಜನರೊಂದಿಗೆ ನೇರ ಸಂವಾದ ನಡೆಸುತ್ತಿದ್ದಾರೆ. ದೇಶದ ಆರ್ಥಿಕ ಬೆಳವಣಿಗೆ, ಅಭಿವೃದ್ಧಿ ಯೋಜನೆಗಳು ಹಾಗೂ ಯುವಕರಿಗೆ ಪ್ರೇರಣೆ ನೀಡುವ ಹಲವಾರು ವಿಷಯಗಳನ್ನು ಈ ಕಾರ್ಯಕ್ರಮದ ಮೂಲಕ ತಲುಪಿಸಲಾಗುತ್ತಿದೆ. ಕೇಂದ್ರ ಸರ್ಕಾರವು ಸ್ವ ಉದ್ಯೋಗಕ್ಕೆ ಶೇ.90ರಷ್ಟು ಆರ್ಥಿಕ ನೆರವು ನೀಡುತ್ತಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು. ಬಜೆಟ್ನಲ್ಲಿ ಘೋಷಿಸಲಾದ ಯೋಜನೆಗಳನ್ನು ಸರಿಯಾಗಿ ಬಳಸಿಕೊಳ್ಳುವುದು ಜನರ ಜವಾಬ್ದಾರಿಯಾಗಿದೆ. ಮನ್ ಕಿ ಬಾತ್ ಕಾರ್ಯಕ್ರಮವನ್ನು ದ.ಕ.ಜಿಲ್ಲೆಯ 1876 ಬೂತ್ಗಳಲ್ಲಿಯೂ ವೀಕ್ಷಿಸಲಾಗುತ್ತಿದೆ ಎಂದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾಡ್ತಾ ಅವರು ಮಾತನಾಡಿ, ಮನ್ ಕೀ ಬಾತ್ ಕಾರ್ಯಕ್ರಮ ದೇಶದಲ್ಲಿ ನಡೆಯುತ್ತಿರುವ ಬದಲಾವಣೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ಮಹತ್ವದ ವೇದಿಕೆಯಾಗಿದೆ. ಬೂತ್ ಮಟ್ಟದ ಪದಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ನಡೆಯಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೆಚ್ಚು ಗಮನಹರಿಸಿ ಮಾಹಿತಿ ಹಂಚಿಕೊಳ್ಳಬೇಕು. ಈ ಮೂಲಕ ಗ್ರಾಮಗಳ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರವನ್ನು ದೇಶದ ಮಾದರಿ ಕ್ಷೇತ್ರವನ್ನಾಗಿ ಮಾಡಲು ಪ್ರತಿಯೊಬ್ಬರ ಜವಾಬ್ದಾರಿ ಇದೆ ಎಂದು ಹೇಳಿದರು.
ಮನ್ ಕೀ ಬಾತ್ ಜಿಲ್ಲಾ ಸಹ ಸಂಚಾಲಕ ಜಯಕುಮಾರ್, ಎಸ್ಸಿ ಯುವ ಮೋರ್ಚಾ ಉಪಾಧ್ಯಕ್ಷ ಶಿವಪ್ರಸಾದ್, ಜಿಲ್ಲಾ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಬಾಲಕೃಷ್ಣ ಬಾಣಜಾಲು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಪ್ರಸಾದ್ ಬಲ್ಯ, ೨೧ನೇ ಬೂತ್ ಅಧ್ಯಕ್ಷ ರಕ್ಷಿತ್ ಮಡಿವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್ಸಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಿ ಏಳ್ತಿಮಾರ್ ಸ್ವಾಗತಿಸಿ, ನಿರೂಪಿಸಿದರು. ರವಿಪ್ರಸಾದ್ ಬಲ್ಯ ವಂದಿಸಿದರು. ಬೂತ್ ಮಟ್ಟದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿ ಮನ್ ಕೀ ಬಾತ್ ಕಾರ್ಯಕ್ರಮದ ವೀಕ್ಷಣೆ ಮಾಡಿದರು.










