






ಪುತ್ತೂರು: ಹೋರಿ ಹಾಯ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ವೈದ್ಯರು ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ್ದರಿಂದ ಗಾಯಾಳು ಮೃತಪಟ್ಟಿದ್ದಾರೆ ಎಂದು ಮೃತರ ಸಹೋದರ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ಮಹಮ್ಮದ್ ಶರೀಫ್ ಪಿ.(35ವ.)ಎಂಬವರಿಗೆ ಮೇ 14ರಂದು ರಾತ್ರಿ ಮನೆಯಲ್ಲಿದ್ದ ಹೋರಿ ಹಾಯ್ದು ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ರಿ ಆಸ್ಪತ್ರೆಯ ವೈದ್ಯರು ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ್ದರಿಂದ ಗಾಯಾಳು ಮಹಮ್ಮದ್ ಶರೀಫ್ ರವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು, ಅವರನ್ನು ಮೇ 16ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿಯೂ ಚಿಕಿತ್ಸೆ ಫಲಕಾರಿಯಾಗದೇ ಮಹಮ್ಮದ್ ಶರೀಫ್ ರವರು ಮೇ 20ರಂದು ಅಲ್ಲಿ ಮೃತಪಟ್ಟಿದ್ದರು.



ಈ ಬಗ್ಗೆ ಮಹಮ್ಮದ್ ಶರೀಫ್ ರವರ ಸಹೋದರ ನಾಸಿರುದ್ದೀನ್ ಪಿ. ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವೈದ್ಯಕೀಯ ತಂಡ ರಚನೆ, ಸದ್ರಿ ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷ್ಯದ ಆರೋಪಗಳನ್ನು ಪರಿಶೀಲಿಸಿ ವರದಿ ನೀಡುವ ಸಲುವಾಗಿ ವೈದ್ಯಕೀಯ ತಂಡವನ್ನು ರಚಿಸುವಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಪತ್ರ ವ್ಯವಹಾರ ನಡೆಸಲಾಗಿದ್ದು, ವರದಿ ಬಂದ ಬಳಿಕ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.










