






ನೆಲ್ಯಾಡಿ: ಎರಡು ದಿನದ ಹಿಂದೆ ಮಂಗಳೂರಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರತ ಬೀಟ್ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ಸಚಿನ್ ಕೆ.ಆರ್.(24ವ.) ಹಾಗೂ ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಚಂದನ್ (೨೪ವ.)ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ಮೇ 26ರಂದು ಕೇರಳದಲ್ಲಿ ಬಂಧಿಸಿದ್ದಾರೆ.


ಮೇ ೨೪ರಂದು ಬೆಳಗಿನ ಜಾವ ೨ ಗಂಟೆಯ ವೇಳೆಗೆ ಮಂಗಳೂರು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೆಂಪು ಬಣ್ಣದ ಎಲೆಕ್ಟ್ರಿಕಲ್ ಸ್ಕೂಟರ್ನಲ್ಲಿ ಬಂದ ಇಬ್ಬರು ಯುವಕರಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಏಕಾಏಕಿ ಸಿಮೆಂಟ್ ಶೀಟ್ನ ತುಂಡಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ತಲೆಗೆ ಹೊಡೆದು ಹಲ್ಲೆ ನಡೆಸಿದ್ದ ಪರಿಣಾಮವಾಗಿ ಪೊಲೀಸ್ ಸಿಬ್ಬಂದಿಯ ತಲೆಗೆ ಗಾಯ ಉಂಟಾಗಿತ್ತು. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಯತ್ನ ನಡೆಸಿರುವ ಬಗ್ಗೆ ಮಂಗಳೂರು ಉರ್ವ ಪೊಲೀಸ್ ಠಾಣೆ ಅ.ಕ್ರ 57/2026 ಕಲಂ 121(1),109,132,3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.



ಸದ್ರಿ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಗುರುತಿಸಿ ತನಿಖೆಯಲ್ಲಿ ದೊರೆತ ಸಾಕ್ಷ್ಯಾಧಾರ ಮತ್ತು ಖಚಿತ ಮಾಹಿತಿಯ ಆಧಾರದಲ್ಲಿ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಕೇರಳ ರಾಜ್ಯದ ಕಾಂಞಿಗಾಡ್ ಪ್ರದೇಶದಲ್ಲಿ ಮೇ ೨೬ರಂದು ಸಿಸಿಬಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಕೃತ್ಯಕ್ಕೆ ಉಪಯೋಗಿಸಿರುವ ಬೈಕ್ ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಆರೋಪಿಗಳಾದ ಸಚಿನ್ ಕೆ.ಆರ್.ಹಾಗೂ ಚಂದನ್ ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಈ ಪೈಕಿ ಸಚಿನ್ ಕೆ.ಆರ್. ಕುಂಟಿಕಾನದ Pಔಓ Pಔಓ ಸ್ವೀಟ್ಸ್ ಫ್ಯಾಕ್ಟರಿಯಲ್ಲಿ ಚಾಲಕನಾಗಿ ಹಾಗೂ ಚಂದನ್ ಕೂಳೂರಿನ ಅದ್ವೈತ್ ಕಿಯಾ ಶೋ ರೂಮ್ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಬೆಳಗಿನ ಜಾವ ೨ ಗಂಟೆಯ ವೇಳೆಗೆ ನಗರದಲ್ಲಿ ಸುತ್ತಾಡುತ್ತಿದ್ದ ಇವರನ್ನು ಬೀಟ್ ಪೊಲೀಸರು ತಡೆದು ಪ್ರಶ್ನಿಸಿದ್ದಕ್ಕೆ ಸಿಟ್ಟುಗೊಂಡು ಪೊಲೀಸರ ಮೇಲೆ ಸಿಮೆಂಟ್ ಸೀಟಿನ ತುಂಡಿನಿಂದ ಹಲ್ಲೆ ನಡೆಸಿರುವುದು ತನಿಖೆಯಿಂದ ತಿಳಿದುಬಂದಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.










