ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘ ರಚನೆ

0

ಪುತ್ತೂರು: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಪೋಷಕರ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನೆಹರುನಗರದ ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ರಕ್ಷಕ-ಶಿಕ್ಷಕ ಸಂಘ ರಚನಾ ಸಭೆಯು ಜೂ.17ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಶಿಸ್ತು, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ವೃತ್ತಿ ಮಾರ್ಗದರ್ಶನ ಹಾಗೂ ಕಾಲೇಜಿನ ಸಮಗ್ರ ಅಭಿವೃದ್ಧಿಯಲ್ಲಿ ಪೋಷಕರ ಸಕ್ರಿಯ ಪಾತ್ರದ ಕುರಿತು ಸಮಗ್ರ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸುಪ್ರೀತ್ ಕೆ.ಸಿರವರು ಮಾತನಾಡಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರು ಮತ್ತು ಪೋಷಕರ ನಡುವಿನ ಸಮನ್ವಯ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕ-ರಕ್ಷಕ ಸಂಘವು ಕಾಲೇಜಿನ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಲಿದೆ ಎಂದರು. 

ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಪಲ್ಲವಿ ಪಿ. ಸ್ವಾಗತಿಸಿ, ಉಪನ್ಯಾಸಕಿ ಶ್ರುತಿ ರೈ ವಂದಿಸಿದರು. ಸಭೆಯಲ್ಲಿ ಕಾಲೇಜಿನ ಉಪನ್ಯಾಸಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳ ಪೋಷಕ ಪ್ರತಿನಿಧಿಗಳು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳ ಆಯ್ಕೆ
ನಂತರ 2026–27ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಯಾಸೀರ್, ಉಪಾಧ್ಯಕ್ಷರಾಗಿ ಸದಾಶಿವ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಆಶಾ ನಾಯಕ್ ಆಯ್ಕೆಯಾದರು. ಸದಸ್ಯರಾಗಿ ರಶೀದ್ ವಿಟ್ಲ, ಸೀಮಾ ರಾವ್, ಸಿಲ್ವೆಸ್ಟರ್ ಎಡ್ವಿನ್ ರೊಡ್ರಿಗಸ್, ಸುಷ್ಮಾ ಭಟ್, ಇಂದಿರಾ ಕೆ.ಎಸ್., ಮೊಹಮ್ಮದ್ ರಫೀಕ್, ಕೆ. ಅಬೂಬಕ್ಕರ್, ಶೆರಿನ್ ಬಾನು ಹಾಗೂ ಕೃಷ್ಣಪ್ಪ ಪೂಜಾರಿ ಆಯ್ಕೆಯಾದರು.

LEAVE A REPLY

Please enter your comment!
Please enter your name here