ಬಿಳಿನೆಲೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ : ಆರೋಗ್ಯಕರ ಜೀವನಕ್ಕೆ ವಿದ್ಯಾರ್ಥಿಗಳಿಗೆ ಕರೆ

0

ಕಡಬ: ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು, ಆರೋಗ್ಯವಂತ ದೇಹ ಮತ್ತು ಸದೃಢ ಮನಸ್ಸು ಇದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕಡಬ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಇಂದುಶೇಖರ ಶೆಟ್ಟಿ ಹೇಳಿದರು.


ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿಳಿನೆಲೆ ವಲಯ, ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಬಿಳಿನೆಲೆ ವಲಯ ಹಾಗೂ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದ ಹಂತವಾಗಿದ್ದು, ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ವ್ಯಕ್ತಿತ್ವ ಮತ್ತು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಕೃಷ್ಣ ಶರ್ಮ ಪಿ. ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ವೇದಿಕೆಯಲ್ಲಿ ಜನಜಾಗೃತಿ ವೇದಿಕೆ ಬಿಳಿನೆಲೆ ವಲಯದ ಸದಸ್ಯ ಗೋಪಾಲಕೃಷ್ಣ ಬಿ., ಜನಜಾಗೃತಿ ವೇದಿಕೆಯ ಸದಸ್ಯೆ ಶ್ರೀಮತಿ ಶಾರದಾ ಉಪಸ್ಥಿತರಿದ್ದರು.


ಬಿಳಿನೆಲೆ ವಲಯದ ಮೇಲ್ವಿಚಾರಕ ರವಿಪ್ರಸಾದ್ ಸ್ವಾಗತಿಸಿದರು. ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಮುಖ್ಯಗುರು ಸತ್ಯಶಂಕರ್ ಭಟ್ ಎಂ. ವಂದಿಸಿದರು. ಸೇವಾ ಪ್ರತಿನಿಧಿ ಸತೀಶ್ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಶಿವಪ್ರಸಾದ್ ರೈ ಮೈಲೇರಿ ಅವರು ವಿದ್ಯಾರ್ಥಿಗಳಿಗೆ ‘ಸ್ವಾಸ್ಥ್ಯ ಸಂಕಲ್ಪ’ ಕುರಿತು ಉಪನ್ಯಾಸ ನೀಡಿ, ಆರೋಗ್ಯಕರ ಜೀವನಶೈಲಿ, ಉತ್ತಮ ಅಭ್ಯಾಸಗಳು ಹಾಗೂ ದುಶ್ಚಟಗಳಿಂದ ದೂರವಿರುವ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here