







ಕಡಬ: ಸವಣೂರು ಗ್ರಾಮದ ಮಾಂತೂರು ಪ್ರದೇಶದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ಒದಗಿಸಲಾಗಿರುವ ಕುಡಿಯುವ ನೀರಿನ ಸಂಪರ್ಕಕ್ಕೆ ಕರ್ನಾಟಕ ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ರಾಜ್ಯ ಆಯುಕ್ತೆ ಫೌಝಿಯಾ ಚಾಲನೆ ನೀಡಿದರು.



ಬಳಿಕ ಅವರು ಅಧಿಕಾರಿಗಳೊಂದಿಗೆ ಮನೆಗಳಿಗೆ ಒದಗಿಸಲಾಗಿರುವ ಕುಡಿಯುವ ನೀರಿನ ಸಂಪರ್ಕಗಳನ್ನು ವೀಕ್ಷಿಸಿ ಯೋಜನೆಯ ಕಾರ್ಯನಿರ್ವಹಣೆ ಹಾಗೂ ನೀರು ಸರಬರಾಜು ವ್ಯವಸ್ಥೆಯನ್ನು ಪರಿಶೀಲಿಸಿದರು. ಯೋಜನೆಯ ಅನುಷ್ಠಾನ ಹಾಗೂ ವ್ಯವಸ್ಥೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಂಡು ನಿಗದಿತ ಅವಧಿಯೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.



ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿನಾಯಕ ನಿರ್ವಾಡೆ, ಜಿಲ್ಲಾ ಪಂಚಾಯತ್ ಅಧಿಕಾರಿ ವೀಣಾ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಯಪ್ರಕಾಶ್, ಕಡಬ ತಾಲೂಕು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸವಣೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುವರ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ರಫೀಕ್ ಎಂ.ಎ. ಹಾಗೂ ಬಾಬು ಎಸ್., ಗ್ರಾಮ ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಮುಗೋರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯ ಗುತ್ತಿಗೆದಾರರು ಉಪಸ್ಥಿತರಿದ್ದರು.
ಜಲ ಜೀವನ್ ಮಿಷನ್ ಯೋಜನೆಯ ಮೂಲಕ ಗ್ರಾಮೀಣ ಭಾಗದ ಪ್ರತಿಯೊಂದು ಮನೆಗೂ ಸುರಕ್ಷಿತ ಕುಡಿಯುವ ನೀರನ್ನು ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ಮಾಂತೂರು ಪ್ರದೇಶದಲ್ಲಿಯೂ ಮನೆಗಳಿಗೆ ನೇರ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ.









