






ಜ್ಞಾನವಿಕಾಸ ಕೇಂದ್ರಗಳ ಮೂಲಕ ಸಮಾಜಮುಖಿ ಕಾರ್ಯಕ್ರಮ ಶ್ಲಾಘನೀಯ : ಎ.ಕೆ ಜಯರಾಮ ರೈ


ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಪುತ್ತೂರು ತಾಲೂಕು ವತಿಯಿಂದ ಕೆಯ್ಯೂರು ವಲಯದ ದೇರ್ಲ ಕಾರ್ಯಕ್ಷೇತ್ರದ ಸ್ವಾತಿ ಜ್ಞಾನವಿಕಾಸ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಿತು.



ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೆಯ್ಯುರು ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೆಯ್ಯೂರು ವಲಯ, ಅಭಿನವ ಕೇಸರಿ ಮಾಡಾವು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇವರ ಸಹಯೋಗದೊಂದಿಗೆ ಆಯೋಜಿಸಲಾದ ಈ ಶಿಬಿರದಲ್ಲಿ ಎ.ಜೆ. ಹಾಸ್ಪಿಟಲ್ ಮತ್ತು ಸಂಶೋಧನಾ ಕೇಂದ್ರ ಮಂಗಳೂರು, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕರ್ನಾಟಕ ಹಾಗೂ ಪ್ರಸಾದ್ ನೇತ್ರಾಲಯ ಪುತ್ತೂರುಗಳ ತಜ್ಞ ವೈದ್ಯರು ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಿದರು.

ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಇಸಿಜಿ, ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್, ಬಾಯಿ ಮತ್ತು ಗಂಟಲು ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಸಾಮಾನ್ಯ ವೈದ್ಯಕೀಯ ತಪಾಸಣೆ ಹಾಗೂ ಕಣ್ಣಿನ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳನ್ನು ಉಚಿತವಾಗಿ ಒದಗಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ತಾಲೂಕಿನ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಉದಯ್ ಕುಮಾರ್ ಜಿ.ಕೆ. ವಹಿಸಿದ್ದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯುರು ಎಸ್‌ಡಿಎಂಸಿ ಅಧ್ಯಕ್ಷ ಎ.ಕೆ. ಜಯರಾಮ್ ರೈ ಕಾರ್ಯಕ್ರಮ ಉದ್ಘಾಟಿಸಿ, ಜ್ಞಾನವಿಕಾಸ ಕಾರ್ಯಕ್ರಮಗಳ ಮೂಲಕ ಸಮಾಜಮುಖಿ ಚಟುವಟಿಕೆಗಳು ನಡೆಯುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ದಕ್ಷಿಣ ಕನ್ನಡ-೨ ಜಿಲ್ಲೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಮಾತನಾಡಿ, ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಆಗಿರುವ ಅಭಿವೃದ್ಧಿ, ಮಹಿಳಾ ಸಬಲೀಕರಣ, ವಾತ್ಸಲ್ಯ ಕಾರ್ಯಕ್ರಮಗಳು ಹಾಗೂ ಆರೋಗ್ಯ ಜಾಗೃತಿ ಕಾರ್ಯಗಳ ಬಗ್ಗೆ ವಿವರಿಸಿದರು. ಆರೋಗ್ಯ ತಪಾಸಣೆಯ ಮೂಲಕ ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಇದರ ಪ್ರಯೋಜನ ಪಡೆಯಬೇಕು ಎಂದು ಕರೆ ನೀಡಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಹಿರಿಯ ಮುಖ್ಯ ಶಿಕ್ಷಕ ಬಾಬು ಎಂ. ಮಾತನಾಡಿ, ಶಾಲೆಯಲ್ಲಿ ನಡೆದಿರುವ ಈ ಆರೋಗ್ಯ ಶಿಬಿರವು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿಯನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಿದರು. ಎ.ಜೆ. ಹಾಸ್ಪಿಟಲ್ ಮತ್ತು ಸಂಶೋಧನಾ ಕೇಂದ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಕಾರ್ತಿಕ್ ಮಾತನಾಡಿ, ಆರೋಗ್ಯ ತಪಾಸಣೆಯ ಮಹತ್ವ ಹಾಗೂ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕಿನ ಯೋಜನಾಧಿಕಾರಿ ಶಶಿಧರ್ ಎಂ., ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರಿನ ವೈದ್ಯಕೀಯ ಸಾಮಾಜಿಕ ಕಾರ್ಯಕರ್ತ ರಂಜನ್, ಅಭಿನವ ಕೇಸರಿ ಮಾಡಾವು ಗೌರವಾಧ್ಯಕ್ಷ ಸುಬ್ರಮಣ್ಯ ರೈ ಶೇಡಿ, ಕೆಯ್ಯೂರು ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ ಕೆ.ಎಸ್., ಜನಜಾಗೃತಿ ಗ್ರಾಮ ಸಮಿತಿಯ ಸದಸ್ಯ ಅಬ್ದುಲ್ ಖಾದರ್ ಮೇರ್ಲ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಲತಾ ಸ್ವಾಗತಿಸಿ, ಸೇವಾ ಪ್ರತಿನಿಧಿ ವಾರಿಜ ವಂದಿಸಿದರು.










