







ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಿಗರೇಟ್ ಸೇದುವುದನ್ನು ಪ್ರಶ್ನಿಸಿದ ನಿರ್ವಾಹಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಎದೆಗೆ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ.


2017ರ ಏ.29ರಂದು ಸಂಜೆ ಸುಮಾರು 6 ಗಂಟೆಗೆ ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಗಡಿಪಿಲ ಎಂಬಲ್ಲಿ ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ (ಕೆಎ-19 ಎಫ್-2219)ಗೆ ಸವಣೂರು ಗ್ರಾಮದ ಪಳ್ಳತ್ತಮೂಲೆ ನಿವಾಸಿ ಶಬೀರ್ ಯಾನೆ ಶಬಿರುದ್ದೀನ್ ಹಿಂಬಾಗಿಲಿನಿಂದ ಸಿಗರೇಟ್ ಸೇದುತ್ತಾ ಹತ್ತಿ ಹಿಂದಿನ ಸೀಟಿನಲ್ಲಿ ಕುಳಿತು ಸಿಗರೇಟ್ ಸೇದುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ನಿರ್ವಾಹಕರು ಬಸ್ಸಿನೊಳಗೆ ಬೀಡಿ, ಸಿಗರೇಟ್ ಸೇದಬಾರದು ಎಂದು ಸೂಚಿಸಿದರು. ಇದರಿಂದ ಆಕ್ರೋಶಗೊಂಡ ಆರೋಪಿ ನಿರ್ವಾಹಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಎದೆಗೆ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ್ದಾನೆ ಎಂದು ಪ್ರಕರಣ ದಾಖಲಾಗಿತ್ತು.



ಪ್ರಕರಣದ ತನಿಖಾಧಿಕಾರಿಯಾಗಿದ್ದ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಓಮನ ಎನ್.ಕೆ. ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ ಅವರು ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರ ಸಹಾಯಕ ಸರ್ಕಾರಿ ಅಭಿಯೋಜಕ ಮನೋಜ್ ಕುಮಾರ್ ವಾದ ಮಂಡಿಸಿದ್ದರು.










