ಪುತ್ತೂರು ದರ್ಬೆಯಲ್ಲಿ ಲ್ಯಾಮಿನೇಷನ್ ಗಲಾಟೆ: 3 ಪ್ರತ್ಯೇಕ ಪ್ರಕರಣ ದಾಖಲು, ಓರ್ವನ ಬಂಧನ

0

ಪುತ್ತೂರು: ದರ್ಬೆಯ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ಲ್ಯಾಮಿನೇಷನ್‌ಗೆ ನೀಡಿದ್ದ ದಾಖಲಾತಿಯೊಂದು ತಾಂತ್ರಿಕ ದೋಷದಿಂದ ಮೆಲ್ಟ್‌ ಆದ ವಿಚಾರಕ್ಕೆ ಸಂಬಂಧಿಸಿ ನಡೆದ ಪರಸ್ಪರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.


ಸುಳ್ಯ ತಾಲೂಕಿನ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ್ (32ವ) ನೀಡಿದ ದೂರಿನಂತೆ, ಆ.21ರಂದು ತಮ್ಮ ಸಹೋದರ ಹಾಗೂ ತಂಗಿಯೊಂದಿಗೆ ಪುತ್ತೂರಿಗೆ ಬಂದಿದ್ದ ಅವರು, ಕೆಲವು ದಾಖಲಾತಿಗಳ ಪ್ರಿಂಟ್ ಹಾಗೂ ಲ್ಯಾಮಿನೇಷನ್ ಮಾಡಿಸಲು ದರ್ಬೆಯ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರಕ್ಕೆ ನೀಡಿದ್ದರು. ಬಳಿಕ ದಾಖಲಾತಿಗಳನ್ನು ವಾಪಸ್ ಪಡೆಯಲು ಹೋದಾಗ, ಅವುಗಳ ಪೈಕಿ ಒಂದು ದಾಖಲಾತಿ ಮೆಲ್ಟ್‌ ಆಗಿರುವುದು ಗಮನಿಸಿ, ಅದನ್ನು ಸರಿಪಡಿಸಿಕೊಡಬೇಕು ಅಥವಾ ಹೊಸ ದಾಖಲಾತಿ ಪಡೆಯಲು ರೂ.300 ನೀಡಬೇಕು ಎಂದು ಕೇಳಿದ್ದರು ಎನ್ನಲಾಗಿದೆ.


ಈ ವಿಚಾರದಲ್ಲಿ ಅಂಗಡಿಯಲ್ಲಿದ್ದ ಅಂಜನಾ ಪೈ ಹಾಗೂ ಸುದರ್ಶನ ಪೈ ಅವಾಚ್ಯವಾಗಿ ಬೈದಿದ್ದು, ಸುದರ್ಶನ ಪೈ ಅವರು ಫಾತಿಮತ್ ಮಿಸ್ವಾನ್, ಅವರ ಸಹೋದರ ಹಾಗೂ ತಂಗಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಗಲಾಟೆಯನ್ನು ಸಾರ್ವಜನಿಕರು ಬಿಡಿಸಿದ್ದು, ಗಾಯಗೊಂಡವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಈ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 352, 115(2), 109 ಹಾಗು 3(5)ರಡಿ ಪ್ರಕರಣ ದಾಖಲಿಸಿ, ಆರೋಪಿ ಸುದರ್ಶನ ಪೈ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


ಅಂಗಡಿ ಮಾಲಕಿಯ ದೂರಿನ ಮೇರೆಗೆ ಮತ್ತೊಂದು ಪ್ರಕರಣ
ಇದೇ ಘಟನೆಯ ಸಂಬಂಧ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ (50) ಅವರು ನೀಡಿದ ದೂರಿನಂತೆ ಮತ್ತೊಂದು ಪ್ರಕರಣ ದಾಖಲಾಗಿದೆ. ಆ.21ರಂದು ಮಹಿಳೆಯೊಬ್ಬರು ಲ್ಯಾಮಿನೇಷನ್‌ಗೆ ನೀಡಿದ್ದ ದಾಖಲಾತಿಯೊಂದು ತಾಂತ್ರಿಕ ದೋಷದಿಂದ ಮೆಲ್ಟ್‌ ಆಗಿದ್ದು, ಈ ವಿಚಾರದಲ್ಲಿ ಮಹಿಳೆ ಗಲಾಟೆ ಮಾಡುತ್ತಿರುವುದಾಗಿ ಸಿಬ್ಬಂದಿ ತಿಳಿಸಿದ ಹಿನ್ನೆಲೆಯಲ್ಲಿ ಅಂಗಡಿಗೆ ತೆರಳಿದ್ದೆ. ಈ ವೇಳೆ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಗಲಾಟೆ ನಡೆಸುತ್ತಿದ್ದು, ದಾಖಲಾತಿಗಳನ್ನು ನೀಡಬೇಕು ಅಥವಾ ರೂ.10 ಸಾವಿರ ಹಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅವರನ್ನು ಸಮಾಧಾನಪಡಿಸಲು ಯತ್ನಿಸಿದಾಗ ವಿಡಿಯೋ ಮಾಡಲು ಮುಂದಾಗಿ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದು, ಮತ್ತೋರ್ವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಂಜನಾ ಪೈ ದೂರಿನಲ್ಲಿ ಆರೋಪಿಸಿದ್ದಾರೆ. ಈ ದೂರಿನ ಮೇರೆಗೆ ಫಾತಿಮತ್ ಮಿಸ್ವಾನ್, ಮುಬಾಶಿರಾ, ಮುಬಾರಿಶ್ ಹಾಗೂ ನೌಶಾದ್ ವಿರುದ್ಧ BNS ಕಲಂ 115(2), 352, 351(2), 79 ಹಾಗೂ 3(5) ರಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.


ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಪ್ರತ್ಯೇಕ ಪ್ರಕರಣ
ಇದೇ ವೇಳೆ ದರ್ಬೆ ಜಂಕ್ಷನ್ ಬಳಿಯ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದ ಎದುರು ಸಾರ್ವಜನಿಕರು ಗಲಾಟೆ ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಸೇರಿದ್ದ ಜನರನ್ನು ಚದುರಿಸುವ ಸಂದರ್ಭದಲ್ಲಿ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ. ಬಳಿಕ ಗಲಾಟೆಗೆ ಸಂಬಂಧಿಸಿದಂತೆ ಕೆಲವರನ್ನು ಠಾಣೆಗೆ ಕರೆದೊಯ್ಯುವಾಗ ನಿಯಾಝ್, ನೌಶಾದ್ ಹಾಗೂ ಇತರರು ತಡೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ  BNS ಕಲಂ 132, 121(1) ಹಾಗು 3(5)ರಡಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here