







ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿ ಕೊಳ್ಳಿ; ಡಾ.ಮೋನಿಕಾ


ಬೆಟ್ಟಂಪಾಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯನ್ನು ಆ. 22 ರಂದು ಆಚರಿಸಲಾಯಿತು.



ಸಂಪನ್ಮೂಲ ವ್ಯಕ್ತಿಯಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ ಇಲ್ಲಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮೋನಿಷಾ ಅವರು ಭಾಗವಹಿಸಿ ಬಾಹ್ಯಾಕಾಶ ವಿಜ್ಞಾನ, ಭಾರತದ ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದ ಸಾಧನೆಗಳು ಹಾಗೂ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಅಗತ್ಯತೆಯ ಕುರಿತು ಮಾಹಿತಿ ನೀಡಿದರು. ಬಾಹ್ಯಾಕಾಶ ವಿಜ್ಞಾನದ ಮಹತ್ವವನ್ನು ಸರಳವಾಗಿ ವಿವರಿಸಿದ ಅವರು, ಈ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ಶೈಕ್ಷಣಿಕ ಮತ್ತು ವೃತ್ತಿಪರ ಅವಕಾಶಗಳ ಕುರಿತು ಮಾರ್ಗದರ್ಶನ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದಾಮೋದರ ಕಣಜಾಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬಾಹ್ಯಾಕಾಶ ಸಂಶೋಧನೆ ಸೇರಿದಂತೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳು ಯುವಜನತೆಗೆ ಸ್ಫೂರ್ತಿದಾಯಕವಾಗಿದ್ದು, ವಿದ್ಯಾರ್ಥಿಗಳು ವೈಜ್ಞಾನಿಕ ಕುತೂಹಲ, ಪ್ರಶ್ನಿಸುವ ಮನೋಭಾವ ಹಾಗೂ ಸಂಶೋಧನಾ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯ ಅಂಗವಾಗಿ ಪ್ರೌಢಶಾಲೆ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಮತ್ತು ಪ್ರಾತ್ಯಕ್ಷಿಕೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಪ್ರದರ್ಶಿಸಿದರು.

ಕಾರ್ಯಕ್ರಮದ ಅಂಗವಾಗಿ ಪ್ರೌಢಶಾಲೆ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಶೈಕ್ಷಣಿಕ, ಸೃಜನಾತ್ಮಕ ಹಾಗೂ ಪ್ರಾತ್ಯಕ್ಷಿಕೆ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿನಿಯರಾದ ಕು. ವಂದನಾ ಹಾಗೂ ಕು. ಅರ್ಚನಾ ಪ್ರಾರ್ಥಿಸಿದರು. ಪ್ರೊ. ಅಶ್ವಿನಿ ಕೆ. ಎನ್. ಸ್ವಾಗತಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ. ಗಾಯತ್ರಿ ಅವರು ವಂದಿಸಿದರು. ಅಂತಿಮ ಬಿ.ಎಸ್ಸಿ. ವಿದ್ಯಾರ್ಥಿ ತನುಷ್ ಕಾರ್ಯಕ್ರಮ ನಿರೂಪಿಸಿದರು.
ಐಕ್ಯುಎ ಸಿ ಸಂಚಾಲಕರಾದ ಪ್ರೊ. ರಾಮಚಂದ್ರ ಡಿ. ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಹಕರಿಸಿದರು.









