






ಪುತ್ತೂರು: ಪವಿತ್ರ ಈದ್ ಮಿಲಾದ್ ಹಬ್ಬದ ಆಚರಣೆ ಹಾಗೂ ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಹಿಂದೂ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪುತ್ತೂರು ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.



ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಭದ್ರತಾ ಭಾವನೆ ಮೂಡಿಸುವ ಉದ್ದೇಶದಿಂದ ನಗರದ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪುತ್ತೂರು ಗಾಂಧಿಕಟ್ಟೆ ಬಳಿ ಸ್ಪೆಷಲ್ ಆಕ್ಷನ್ ಫೋರ್ಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ದರ್ಬೆ ಪರಿಸರದಲ್ಲಿ ರಾಜ್ಯ ಮೀಸಲು ಪಡೆಯ ಸಿಬ್ಬಂದಿ ಸೇರಿದಂತೆ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.



ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಯಾವುದೇ ಬೆಂಕಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ವಾಹನವನ್ನು ನಿಯೋಜಿಸಲಾಗಿದೆ. ನಗರದ ಪ್ರಮುಖ ವೃತ್ತಗಳು, ಜನಸಂದಣಿ ಇರುವ ಪ್ರದೇಶಗಳು ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸರು ನಿರಂತರ ನಿಗಾ ವಹಿಸುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.










