







ಪುತ್ತೂರು: ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇದರ ಪದವಿಪೂರ್ವ ಕಾಲೇಜು ವಿಭಾಗದ 2026-27ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ವೈಭವದಿಂದ ನಡೆಯಿತು.



ಕಾರ್ಯಕ್ರಮವನ್ನು ಸವಣೂರು ಸರಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ವಿದ್ಯಾಧರ ರೈ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಮಾರ್ಚ್ 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ (ಡಿಸ್ಟಿಂಕ್ಷನ್) ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ, ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಹಸೀನಾ ಬಾನು ಎಸ್. ಇ. ವಹಿಸಿ, ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.



ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಅರುಣ್ ಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಬಾಬು ಬಿ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುಹಮ್ಮದ್ ಆಶಿಲ್ ಹಾಗೂ ಕಾರ್ಯದರ್ಶಿ ಸಾನ್ವಿ ಡಿ. ಪಿ. ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಯಕ್ಷಿತಾ, ಸುಪ್ರೀತಾ ಕೆ., ಕೀರ್ತನಾ ಹಾಗೂ ನಿಶ್ಮಿತಾ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ನಿರ್ದೇಶಕ, ಉಪನ್ಯಾಸಕ ಇಸ್ಮಾಯಿಲ್ ಪಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕರಾದ ಬಾಲಕೃಷ್ಣ ಬೇರಿಕೆ ಮತ್ತು ಗುಣಶೀಲಾ ಕೆ. ಎನ್. ಕಾರ್ಯಕ್ರಮ ನಿರೂಪಿಸಿದರೆ, ಉಪನ್ಯಾಸಕಿ ಉಮಾಶಂಕರಿ ಎಸ್. ಕೆ. ವಂದಿಸಿದರು.










