







ಪುತ್ತೂರು: ಮಂಗಳೂರು ಕೆಆರ್‌ಐಡಿಎಲ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್‌ಗಳ ವಿರುದ್ಧ ಪುತ್ತೂರು ಶಾಸಕ ಅಶೋಕ್ ರೈ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದಾರೆ.
ಪತ್ರದಲ್ಲಿ ಮಂಗಳೂರು ಕೆ.ಆರ್.ಐ.ಡಿ.ಎಲ್. ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಗಳು ಭ್ರಷ್ಟಾಚಾರ ನಡೆಸಿ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಮಂಗಳೂರು ಕೆ.ಆರ್.ಐ.ಡಿ.ಎಲ್. ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಅವರ ಕರ್ತವ್ಯ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಹಾಗೂ ದೂರುಗಳು ಕೇಳಿಬಂದಿರುತ್ತವೆ.


ವಿಶೇಷವಾಗಿ, ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇಲಾಖೆಯ ಸಚಿವರಿಗೆ ಮಾಸಿಕವಾಗಿ ಹಣ ಸಂದಾಯ ಮಾಡಬೇಕಾಗುತ್ತದೆ ಎಂದು ಹೇಳಿ, ಕೆ.ಆರ್.ಐ.ಡಿ.ಎಲ್. ಚಾರ್ಜ್ ಹೆಸರಿನಲ್ಲಿ ಶೇ.7ರಷ್ಟು ವರೆಗೆ ಹೆಚ್ಚುವರಿ ಹಣವನ್ನು ಪಡೆಯಲಾಗುತ್ತಿದೆ. ಈ ಬಗ್ಗೆ ಪ್ರಶ್ನಿಸಿದ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡಿರುವ ಬಗ್ಗೆ, ಗಂಭೀರ ಆರೋಪಗಳು ಹಾಗೂ ದೂರುಗಳು ಬಂದಿರುತ್ತವೆ.
ಸಾರ್ವಜನಿಕ ಹಣದಿಂದ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಹಾಗೂ ನಿಯಮಾನುಸಾರ ಕಾರ್ಯನಿರ್ವಹಣೆ ಅತ್ಯಂತ ಅಗತ್ಯವಾಗಿರುತ್ತದೆ. ಆದರೆ, ಈ ಅಧಿಕಾರಿಗಳ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಸತ್ಯವಾಗಿದ್ದಲ್ಲಿ, ಅದು ಸಾರ್ವಜನಿಕ ಹಣದ ದುರುಪಯೋಗಕ್ಕೆ ಕಾರಣವಾಗುವುದಲ್ಲದೆ, ಇಲಾಖೆಯ ಘನತೆ ಹಾಗೂ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುವ ಗಂಭೀರ ವಿಷಯವಾಗಿದೆ.



ಆದ್ದರಿಂದ, ಆರೋಪಿತ ಅಧಿಕಾರಿಗಳ ವಿರುದ್ಧ ಈಗಾಗಲೇ ಬಂದಿರುವ ದೂರುಗಳು ಮತ್ತು ಆರೋಪಗಳ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸುವಂತೆ ಮನವಿ ಮಾಡುತ್ತಿದ್ದೇನೆ. ಅಲ್ಲದೆ, ತನಿಖೆ ಪೂರ್ಣಗೊಳ್ಳುವವರೆಗೆ ಆರೋಪಗಳ ಗಂಭೀರತೆಯನ್ನು ಪರಿಗಣಿಸಿ, ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸುವುದು ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ತನಿಖೆಯಲ್ಲಿ ಆರೋಪಗಳು ಸಾಬೀತಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಅನ್ವಯಿಸುವ ಸೇವಾ ನಿಯಮಗಳು ಹಾಗೂ ಇಲಾಖಾ ನಿಯಮಾವಳಿಗಳನ್ನಯ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಸರ್ಕಾರದ ಹಣಕ್ಕೆ ನಷ್ಟ ಉಂಟಾಗಿರುವುದು ಅಥವಾ ಅಕ್ರಮವಾಗಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ದೃಢಪಟ್ಟಲ್ಲಿ, ಅಂತಹ ಮೊತ್ತವನ್ನು ವಸೂಲಿ ಮಾಡುವುದರ ಜೊತೆಗೆ ಕಾನೂನುಬದ್ದ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಆದ್ದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಕೈಗೊಂಡ ಕ್ರಮದ ವಿವರವನ್ನು ತಿಳಿಸುವಂತೆಯೂ ಪತ್ರದಲ್ಲಿ ಅಶೋಕ್ ಮನವಿ ಮನವಿ ಮಾಡಿಕೊಂಡಿದ್ದಾರೆ.










