







ಕಡಬ: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರೈಂ ನಂ. 0097/2026 ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.


ಪ್ರಕರಣಕ್ಕೆ ಸಂಬಂಧಿಸಿ ರಮೇಶ್ ಕೆ. ಅವರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿ (CRL.P No.13222/2026) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಸೆ.2ರಂದು ಈ ಆದೇಶ ನೀಡಿದೆ. ಅರ್ಜಿದಾರರ ಪರ ಖ್ಯಾತ ವಕೀಲರಾದ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಪ್ರತಿವಾದಿಯಾಗಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.



ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಪ್ರತಿವಾದಿ ನಂ.1ರ ಪರ ಹೈಕೋರ್ಟ್ ಸರ್ಕಾರಿ ವಕೀಲರು ನೋಟಿಸ್ ಸ್ವೀಕರಿಸುವಂತೆ ಸೂಚಿಸಲಾಗಿದ್ದು, ಪ್ರತಿವಾದಿ ನಂ.2ಕ್ಕೆ ತುರ್ತು ನೋಟಿಸ್ ಜಾರಿಗೊಳಿಸಲು ನ್ಯಾಯಾಲಯ ಆದೇಶಿಸಿದೆ. ಮುಂದಿನ ವಿಚಾರಣೆಯವರೆಗೆ, ಅರ್ಜಿದಾರರಿಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರೈಂ ನಂ.0097/2026ರ ಮುಂದಿನ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಲಾಗಿದೆ. ಇದಕ್ಕೂ ಮುನ್ನ ಆ.28ರಂದು ನಡೆದ ವಿಚಾರಣೆಯಲ್ಲಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆ.11ರ ದೂರನ್ನು ಪೊಲೀಸರು ಏಕೆ ದಾಖಲಿಸಿಲ್ಲ ಎಂಬ ಬಗ್ಗೆ ಮಾಹಿತಿ ಪಡೆದು ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿತ್ತು. ಅಲ್ಲದೆ, ದೂರು ಪರಿಶೀಲಿಸಿದಾಗ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(1)(r) ಮತ್ತು 3(1)(s)ರ ಅಂಶಗಳು ಕಂಡುಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಾಲಯ, ಆ ಕಾಯ್ದೆಗೆ ಸಂಬಂಧಿಸಿದ ಆರೋಪಗಳ ವಿಚಾರಣೆಯಲ್ಲೂ ಮಧ್ಯಂತರ ತಡೆಯಾಜ್ಞೆ ನೀಡಿತ್ತು.










