







ನೆಲ್ಯಾಡಿ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಸೆ.10ರಂದು ನೆಲ್ಯಾಡಿಯಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.


ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣ ಹಾಗೂ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪುತ್ತೂರು ಇದರ ಸ್ಪೆಷಲ್ ಕೇಸ್ ನಂ.5023/2025ರ ವಾರಂಟ್ ಆರೋಪಿಯಾಗಿದ್ದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್ ಎಚ್.ಇ. ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರ ನೇತೃತ್ವದಲ್ಲಿ ನೆಲ್ಯಾಡಿ ಹೊರಠಾಣೆ ಸಿಬ್ಬಂದಿ ದಯಾನಂದ ಹಾಗೂ ರವಿರಾಜ್ ಅವರು ಕಾರ್ಯಾಚರಣೆ ನಡೆಸಿ ರಮೇಶ್ನನ್ನು ನೆಲ್ಯಾಡಿಯಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಆರೋಪಿಯನ್ನು ಪುತ್ತೂರಿನಲ್ಲಿರುವ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.













